ಪಿಯು ಉಪನ್ಯಾಸಕರಿಗೆ ಬಡ್ತಿ; ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

Update: 2023-08-25 17:38 GMT

ಬೆಂಗಳೂರು, ಆ.25: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬಡ್ತಿ ನೀಡಿ, ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ನಗರದ ಸಮಗ್ರ ಶಿಕ್ಷಣ ಕರ್ನಾಟಕ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಂತರ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ವೇತನ ತಾರತಮ್ಯ ಸರಿಪಡಿಸುವ ಕುರಿತು ಅರ್ಥಿಕ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ವೇತನ ಆಯೋಗದ ವರದಿ ಬಂದ ನಂತರ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಬರಗೂರು ರಾಮಚಂದ್ರಪ್ಪ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಹಂತದ ಮಹತ್ವ ಹಾಗೂ ಬಿಎಡ್ ಪದವಿ ಹೊಂದಿಲ್ಲದ ಅನುದಾನಿತ, ಸರಕಾರಿ ಹಾಗೂ ಜೆಒಸಿಯ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಉಪನ್ಯಾಸಕರ ಸಮಸ್ಯೆಗಳ ಬಗೆಗೆ ಸಚಿವರಿಗೆ ವಿವರಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಹಂತ ಹಂತವಾಗಿ ಶಾಲಾ ಶಿಕ್ಷಣ ಇಲಾಖೆಯ ಜೊತೆಗೆ ವಿಲೀನಗೊಳಿಸುವುದನ್ನು ಕೈಬಿಡಬೇಕು. ದೇಶದಲ್ಲಿಯೇ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಿಂದಿನ ಅಸ್ಮಿತೆಯನ್ನು ಉಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯಪುರ್ಲೆ, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತೆ ಬಿ.ಬಿ.ಕಾವೇರಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News