ಆಸ್ತಿ ತೆರಿಗೆ ‘ಒಟಿಎಸ್ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿಕೆಶಿ

Update: 2024-08-02 10:10 GMT

ಬೆಂಗಳೂರು, ಆ.2: ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

11ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್, ಈವರೆಗೂ 3 ಸಾವಿರ ಕೋಟಿ ರೂ.ನಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವರಿಯಾಗಿ 400 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಸರ್ವರ್ ಸಮಸ್ಯೆ ಹಾಗೂ ಮತ್ತೆ ಕೆಲವರು ಚೆಕ್ ನೀಡಿದ್ದು, ಜುಲೈ 31ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ ಎಂದು ಡಿಸಿಎಂ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News