ರಾಜ್ಯದಲ್ಲಿ ಹೊಸದಾಗಿ 3,988 ಅಂಗನವಾಡಿ ತೆರೆಯಲು ಕೇಂದ್ರಕ್ಕೆ ಪ್ರಸ್ತಾವ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-12-13 16:52 IST
Photo of  Lakshmi Hebbalkar

ಲಕ್ಷ್ಮೀ ಹೆಬ್ಬಾಳ್ಕರ್

  • whatsapp icon

ಬೆಳಗಾವಿ : ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಜವರಾಯಿಗೌಡ ಪರವಾಗಿ ಬಿಜೆಪಿ ಸದಸ್ಯ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರಕಾರದ ಅನುಮೋದನೆ ಅವಶ್ಯಕವಿರುತ್ತದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ.20ರಷ್ಟು ಇರುತ್ತದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರಕಾರದ ಪಾಲು ಶೇ.30ರಷ್ಟಿರುತ್ತದೆ. ಮುಂದುವರೆದು ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

3 ಬಾರಿ ಕೇಂದ್ರ ಸಚಿವೆ ಭೇಟಿ: ‘ಕೇಂದ್ರದ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು. ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಅನುಮೋದನೆ ಅಗತ್ಯ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣ: ‘ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಹಿಂದಿನ 2 ವರ್ಷಗಳಲ್ಲಿ 22.92 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದೆ’

ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News