ಸಿಎಂ ವಿರುದ್ಧ ಪ್ರಾಸಿಕ್ಯೂಷನ್‍: ರಾಜ್ಯಪಾಲರ ನಡೆ ಖಂಡಿಸಿ ನಾಳೆ ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

Update: 2024-08-20 13:09 GMT

ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ನಾಳೆ(ಆ.21) ಬೆಂಗಳೂರಿನಲ್ಲಿ ವಿದ್ಯಾರ್ಥಿಗಳೊಂದಿಗೆ ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ತಿಳಿಸಿದೆ.

ಮಂಗಳವಾರ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನಂತ್ ನಾಯ್ಕ್, 40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಅವರು ನಾಡಿನ ನೆಲ, ಜಲ, ಭಾಷೆ ಮತ್ತು ದಮನಿತ ಸಮುದಾಯಗಳ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಜನರ ಆಶೀರ್ವಾದದಿಂದ ನಿರಂತರವಾಗಿ ಜನಸೇವೆಯಲ್ಲಿ ನಿರತರಾಗಿದ್ದಾರೆ ಎಂದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳ ಅಧಿಕಾರ ಅವಧಿಯಲ್ಲಿ ನಿವೇಶನ ಹಂಚಿಕೆ ಆಗಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ, ರಾಜಭವನವನ್ನು ಬಳಸಿಕೊಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕೂಟ ರಾಜ್ಯ ಸರಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ದೂರಿದರು.

ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾಗಿ ಕಾರ್ಯನಿರ್ವಹಿಸಬೇಕಿದ್ದ ರಾಜ್ಯಪಾಲರು ಕೇಂದ್ರದ ಸರಕಾರದ ಏಜೆಂಟರಂತೆ ವರ್ತಿಸುತ್ತಾ ಹಾಗೂ ಕುಮ್ಮಕ್ಕಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದಾರೆ. ರಾಜ್ಯಪಾಲರು ದುರುದ್ದೇಶದಿಂದ ಮುಖ್ಯಮಂತ್ರಿಗಳ ಮೇಲೆ ಮಸಿ ಬಳಿಯುತ್ತಾ ರಾಜ್ಯ ಸರಕಾರವನ್ನು ದುರ್ಬಲಗೊಳಿಸುವ ಹೀನ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಆಪಾದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News