ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ, ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಿ :
ಬಿಜೆಪಿ- ಜೆಡಿಎಸ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, "ಸಿದ್ದರಾಮಯ್ಯನವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ. ಭ್ರಷ್ಟ ಕಾಂಗ್ರೆಸ್, ಭ್ರಷ್ಟ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ- ಜೆಡಿಎಸ್ ನಿರಂತರ ಹೋರಾಟ ನಡೆಸುತ್ತಿವೆ. ಈ ಹೋರಾಟ ಇದೀಗ ತಾರ್ಕಿಕ ಅಂತ್ಯಕ್ಕೆ ಬಂದಿದೆ. ಮೈಸೂರಿನ ಮುಡ ಹಗರಣ, ವಾಲ್ಮೀಕಿ ನಿಗಮದ ಹಗರಣಗಳು ಇದರಲ್ಲಿ ಪ್ರಮುಖವಾಗಿವೆ. ಮುಡದಡಿ 4ರಿಂದ 5 ಸಾವಿರ ಕೋಟಿಯ ನಿವೇಶನಗಳನ್ನು ನುಂಗಿ ಹಾಕಿದ್ದಾರೆ. ಇದನ್ನು ಖಂಡಿಸಿ, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ" ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಎರಡೂ ಪಕ್ಷಗಳ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರು ಉಪಸ್ಥಿತರಿದ್ದರು.