ಸಚಿವ ಝಮೀರ್ ಅಹ್ಮದ್‌ಗೆ ಪ್ರಾಣ ಬೆದರಿಕೆ ಪ್ರಕರಣ : ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಜೀವ ಬೆದರಿಕೆವೊಡ್ಡಿದ ಆರೋಪದಲ್ಲಿ ಸಂಘ ಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ವೀಡಿಯೊಂದನ್ನು ಹರಿಬಿಟ್ಟು, ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಅವರಿಗೆ ಜೀವ ಬೆದರಿಕೆವೊಡ್ಡಿದ್ದ ಎಂದು ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರ ನಿನ್ನೆ ತಡರಾತ್ರಿ ಬಂಧಿಸಿದ ಪೊಲೀಸರು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುರಿತು ಸಚಿವ ಝಮೀರ್ ಅಹ್ಮದ್ ಖಾನ್ ಅಸಭ್ಯ ಭಾಷೆ ಬಳಕೆ ಮಾಡಿದ್ದಾರೆ ಎಂದು ಝಮೀರ್ ಅಹ್ಮದ್ ವಿರುದ್ಧ ಪುನೀತ್ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಸಂಬಂಧ ಸಚಿವರ ಆಪ್ತ ಸಹಾಯಕ ಬಿ.ಎಸ್.ಅಶೋಕ್ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿಯನ್ನು ಪೋಲೀಸರು ಬಂಧಿಸಿದ್ದರು.