ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ : ಆರ್‌.ಅಶೋಕ್‌

Update: 2024-07-20 09:19 GMT

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೆ?. ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿಹಾಕಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದರು.

ತನಿಖೆ ಮಾಡಿ :

ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ? ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News