ಕರಾವಳಿ ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆ
ಬೆಂಗಳೂರು, ಆ.4: ಮುಂದಿನ ಎರಡು ದಿನವೂ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಆದರೆ, ಒಳನಾಡಿನಲ್ಲಿ ಒಂದೆರಡು ಕಡೆ ಮಾತ್ರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲ್ಲದೆ, ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಕಳೆದ 24 ಗಂಟೆಯಲ್ಲಿಯೂ ಸಹ, ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಆದರೆ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.