ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಶನಿವಾರ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಧಾರವಾಡ, ಹುಬ್ಬಳ್ಳಿ ಮತ್ತು ಬೆಂಗಳೂರಿನಿಂದ ವಶಕ್ಕೆ ಪಡೆದ ನಾಲ್ವರನ್ನು ಸುದೀರ್ಘವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಭರದಿಂದ ಸಾಗಿದೆ. ಇಲ್ಲಿಯವರೆಗೆ ಪಡೆದ ವಿಭಿನ್ನ ಸುಳಿವುಗಳ ಮೇಲೆ ಹಲವಾರು ತಂಡಗಳು ಕೆಲಸ ಮಾಡುತ್ತಿವೆ ಎಂದು ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
"ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತಾ ಕಾಳಜಿಗಳನ್ನು ಗಮನದಲ್ಲಿಟ್ಟುಕೊಂಡು, ಮಾಧ್ಯಮಗಳು ಊಹಾಪೋಹಗಳಲ್ಲಿ ತೊಡಗದಂತೆ ಮತ್ತು ಸಹಕರಿಸುವಂತೆ ಮನವಿ ಮಾಡಲಾಗಿದೆ" ಎಂದು ಆಯುಕ್ತ ದಯಾನಂದ ಅವರು ಹೇಳಿದರು.