ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಆರೋಪಿಗಳ ಎನ್‍ಐಎ ಕಸ್ಟಡಿ ಅವಧಿ ವಿಸ್ತರಣೆ

Update: 2024-04-22 14:30 GMT

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಇಬ್ಬರು ಬಂಧಿತ ಆರೋಪಿಗಳ ಎನ್‍ಐಎ ಕಸ್ಟಡಿ ಅವಧಿಯನ್ನು ಎ.29ರವರೆಗೆ ವಿಸ್ತರಿಸಿ ಬೆಂಗಳೂರಿನ ಎನ್‍ಐಎ ವಿಶೇಷ ನ್ಯಾಯಾಲಯ ಆದೇಶಿಸಿರುವುದು ವರದಿಯಾಗಿದೆ.

ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ ಎಂಬುವರನ್ನು ಎ.29ರವರೆಗೆ ಎನ್‍ಐಎ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಮೂಲಗಳು ತಿಳಿಸಿವೆ.

ಎ.12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದ ಎನ್‍ಐಎ ಅಧಿಕಾರಿಗಳು ಬೆಂಗಳೂರಿಗ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಎ.22ರ ಸೋಮವಾರ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಎನ್‍ಐಎ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಪುನಃ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು.

ಮಾರ್ಚ್ 1ರಂದು ಐಟಿಪಿಎಲ್ ರಸ್ತೆಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ 9 ಜನರು ಗಾಯಗೊಂಡಿದ್ದರು. ಪ್ರಮುಖ ಆರೋಪಿಯ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News