ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ ಎನ್‍ಐಎ
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ನಾಲ್ವರು ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ನ್ಯಾಯಾಲಯಕ್ಕೆ ಸೋಮವಾರ ಚಾರ್ಜ್‍ಶೀಟ್ ಸಲ್ಲಿಸಿದೆ.
ಆರೋಪಿಗಳ ವಿರುದ್ಧ ಹಿಂದಿನ ಅಧಿಕೃತ ಕ್ರಿಮಿನಲ್ ಕೋಡ್-ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ವಿನಾಶ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಯಿದೆ ಅಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾ.1ರಂದು ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ ಗ್ರಾಹಕರು, ಕೆಫೆ ಸಿಬ್ಬಂದಿ ಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆ ಆರಂಭಿಸಿದ್ದ ಎನ್‍ಐಎ, ಆರೋಪಿ ಮಸಾವಿರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ಅಹಮದ್ ತಾಹಾನ ಪಾತ್ರದ ಕುರಿತು ಮಾಹಿತಿ ಕಲೆ ಹಾಕಿತ್ತು. ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಆರೋಪಿಗಳನ್ನು ಬರೋಬ್ಬರಿ 42 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಎನ್‍ಐಎ ಅಧಿಕಾರಿಗಳು ಬಂಧಿಸಿದ್ದರು.
ಬಿಜೆಪಿ ಕಚೇರಿ ಸ್ಫೋಟಿಸುವ ಸಂಚು ವಿಫಲ: ಜ.22ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಂದೇ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ಫೋಟಿಸಲು ಯತ್ನಿಸಲಾಗಿತ್ತು. ಈ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲು ಆರೋಪಿಗಳ ಸಂಚು ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಎನ್‍ಐಎ ವಿಶೇಷ ಕೋರ್ಟ್‍ಗೆ ಸಲ್ಲಿಸಿರುವ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.