ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? : ಆರ್.ಅಶೋಕ್

Update: 2024-12-29 12:37 GMT

ಆರ್.ಅಶೋಕ್

ಬೆಂಗಳೂರು : ‘ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು, ನೈತಿಕತೆ ಪ್ರದರ್ಶನ ಮಾಡಲಿ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ರವಿವಾರ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

‘ಈ ಹಿಂದೆ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪ ರಾಜೀನಾಮೆ ಕೇಳಲಾಗಿತ್ತು. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಡೆತ್‍ನೋಟ್‍ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ ಕೊಡುವಂತೆ ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಗೂಂಡಾಗಿರಿ: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15ಲಕ್ಷ ರೂ.ಗೂ ಅಧಿಕ ಹಣ ತೆಗೆದುಕೊಂಡು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ರೂ.ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್‍ನೋಟ್‍ನಲ್ಲಿ ಉಲ್ಲೇಖವಾಗಿದೆ. ಅದರಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಇಲ್ಲಿ ಹೊಣೆಗಾರರು ಎಂದು ಅವರು ಹೇಳಿದ್ದಾರೆ.

ʼರಾಜು ಕಪನೂರ್, ಖರ್ಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾನೆ. ಮಹಾನಗರ ಪಾಲಿಕೆ ಸದಸ್ಯನೂ ಆಗಿದ್ದ ರಾಜು ಕಪನೂರ್, ಈ ಹಿಂದೆ ಅಕ್ರಮ ಪಿಸ್ತೂಲ್ ಹೊಂದಿರುವ ಆರೋಪದಲ್ಲಿ ಬಂಧಿತನಾಗಿದ್ದ. ಇವೆಲ್ಲ ಗೊತ್ತಿದ್ದರೂ ಪ್ರಿಯಾಂಕ್ ಖರ್ಗೆ ಆಪ್ತರಿಂದ ದೂರವಾಗಿಲ್ಲ. ಇಂತಹ ಗೂಂಡಾ, ಸಚಿವರ ಆಪ್ತ ಎಂದರೆ ರಾಜ್ಯದಲ್ಲಿ ಗೂಂಡಾಗಳ, ರೌಡಿಗಳ ಸರಕಾರ ನಡೆಯುತ್ತಿದೆ ಎಂದರ್ಥ’

-ಆರ್.ಅಶೋಕ್ ವಿಪಕ್ಷ ನಾಯಕ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News