ಕೆಂಪು ಮೆಣಸಿನಕಾಯಿ ಬೆಲೆ ಕುಸಿತ; ರೈತರ ನೆರವಿಗೆ ಧಾವಿಸಲು ವಿಧಾನಸಭೆಯಲ್ಲಿ ಸದಸ್ಯರ ಮನವಿ

ಬೆಂಗಳೂರು : ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೂಡಲೇ ಆಂಧ್ರದ ಮಾದರಿಯಲ್ಲೇ ಮಾರುಕಟ್ಟೆ ಮಧ್ಯಪ್ರವೇಶಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಡಳಿತ ಮತ್ತು ವಿಪಕ್ಷ ಸದಸ್ಯರು ಆಗ್ರಹಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.
ಬುಧವಾರ ಬಜೆಟ್ ಮೇಲಿನ ಚರ್ಚೆಯ ವೇಳೆ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ಜೆ.ಎನ್. ಗಣೇಶ್, ‘ಕೆಂಪು ಮೆಣಸಿನಕಾಯಿ ಬೆಲೆ 2022ರಲ್ಲಿ ಪ್ರತಿ ಕ್ವಿಂಟಾಲ್‍ಗೆ 40 ಸಾವಿರ ರೂ.ಗಳಿತ್ತು. ಇದೀಗ ಅದು 8 ಸಾವಿರ ರೂ.ಗೆ ಕುಸಿದಿದೆ. ರಾಜ್ಯ ಸರಕಾರ ಈ ಬಗ್ಗೆ ಗಮನಹರಿಸದಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತವೆ’ ಎಂದು ಎಚ್ಚರಿಸಿದರು.
ಆಂಧ್ರದಲ್ಲಿ ಪ್ರತಿ ಕ್ವಿಂಟಾಲ್‍ಗೆ 11,880 ರೂ.ಗಳನ್ನು ಬೆಲೆ ನಿಗದಿ ಮಾಡಲಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್‍ಗೆ ಸಿಎಂ ಪತ್ರ ಬರೆದಿದ್ದಾರೆ. ಆದರೆ, ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸಂಸದರು ಈ ಬಗ್ಗೆ ಧ್ವನಿ ಎತ್ತಬೇಕು. ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಬಗ್ಗೆ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಆ ನಿಟ್ಟಿನಲ್ಲಿ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ. ಮಾರುಕಟ್ಟೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೇ ಧ್ವನಿಗೂಡಿಸಿದ ಬಿಜೆಪಿಯ ಜನಾರ್ಧನರೆಡ್ಡಿ ಮಾತನಾಡಿ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಮೆಣಸಿನಕಾಯಿ ಬೆಳೆ ಬೆಳೆಯುತ್ತಿದ್ದಾರೆ. ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ರೈತರಿಗೆ ನೆರವು ಕೊಡಿಸಬೇಕು. ಬೆಂಗಳೂರಿಗೆ ಹೆಚ್ಚು ಅನುದಾನ ನೀಡಲಾಗುತ್ತಿದ್ದು, ಆ ಪೈಕಿ ಶೇ.10ರಷ್ಟನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡುತ್ತಿಲ್ಲ’