ರೇಣುಕಾಸ್ವಾಮಿ ಕೊಲೆ ಪ್ರಕರಣ | ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು : ಬೊಮ್ಮಾಯಿ
ಹುಬ್ಬಳ್ಳಿ : ರೇಣುಕಾಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ಪ್ರಾಮಾಣಿಕ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆ ತೆಗೆದುಕೊಳ್ಳುವುದೇ ಅಪರಾಧ. ಅದು ಕೊಲೆಯಾಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು" ಎಂದು ಹೇಳಿದರು.
ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡಿಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.
ಉಪಚುನಾವಣೆಗೆ ಪ್ರಕ್ರಿಯೆ ಪ್ರಾರಂಭವಾಗಿಲ್ಲ:
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜಿನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು.
ತಮ್ಮ ಪುತ್ರನಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆ ಉತ್ತರಿಸಿದ ಅವರು, ʼಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರು ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ʼಎಂದರು.
ಉತ್ತರ ಕರ್ನಾಟಕಕ್ಕೆ ಅನ್ಯಾಯದ ಪ್ರಶ್ನೆಯೇ ಇಲ್ಲ:
ಕೇಂದ್ರ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯದ ಪ್ರಶ್ನೆಯೇ ಇಲ್ಲ. ಕರ್ನಾಟಕಕ್ಕೆ ಹೆಚ್ಚು ಸಚಿವ ಸ್ಥಾನಗಳು ಸಿಕ್ಕಿವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿದ್ದಾರೆ. ಎನ್.ಡಿ.ಎ ಅಭ್ಯರ್ಥಿಯಾಗಿ ಮೋದಿ ಅವರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಭಾಗಿಯಾದ ಸೌಭಾಗ್ಯ ನನ್ನದು ಎಂದರು.