ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಚಿತ್ರನಟ ದರ್ಶನ್ ಮತ್ತು ಪವಿತ್ರಾ ಗೌಡಗೆ ನಿರಾಶೆಯುಂಟಾಗಿದ್ದು, ನಗರದ 57ನೇ ಸಿಸಿಎಚ್ ನ್ಯಾಯಾಲಯವು ಇವರ ಜಾಮೀನು ಅರ್ಜಿಯನ್ನು ಸೋಮವಾರ ವಜಾಗೊಳಿಸಿದೆ.
ಈ ಪ್ರಕರಣ ಸಂಬಂಧ ಜಾರ್ಮಿನು ಅರ್ಜಿ ಕುರಿತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‍ಪಿಪಿ) ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರಾದ ಜೈಶಂಕರ್ ಅವರು ಅ.14ಕ್ಕೆ ತೀರ್ಪು ಕಾಯ್ದಿರಿಸಿದ್ದರು.
ಸೋಮವಾರದಂದು ನ್ಯಾಯಾಲಯದ ತೀರ್ಪು ಪ್ರಕಟಗೊಂಡಿದ್ದು, ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್ ಎಂಬುವರಿಗೆ ಜಾಮೀನು ಮಂಜೂರಾಗಿಲ್ಲ. ಆದರೆ, ಪ್ರಕರಣದ ಪೈಕಿ ಎ8 ಆರೋಪಿ ರವಿಶಂಕರ್ ಹಾಗೂ ಎ13 ಆರೋಪಿ ದೀಪಕ್‍ಗೆ ಜಾಮೀನು ನೀಡಿ ಆದೇಶಿಸಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೂ.11ರಂದು ನಟ ದರ್ಶನ್ ಹಾಗೂ ಇತರರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಈಗಾಗಲೇ 100ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಸೆ.21ರಂದು ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಪ್ರಾಸಿಕ್ಯೂಷನ್ ಪರ ಪ್ರಸನ್ನಕುಮಾರ್ ವಾದ ಮಂಡಿಸಿದ್ದಾರೆ. ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಿದ್ದಾರೆ.
ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್ ಅವರಿಗೆ ವಿಶೇಷ ಸೌಲಭ್ಯ ನೀಡಿದ ಆರೋಪ ಬಯಲಾದ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೊತೆಗೆ ಪವಿತ್ರಾ ಗೌಡ ಮತ್ತು ಕೆಲವರನ್ನು ಪರಪ್ಪನ ಅಗ್ರಹಾರದಲ್ಲಿ ಉಳಿಸಿಕೊಂಡು, ಇನ್ನಿತರ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸಲಾಗಿತ್ತು.