‘ಶಾಸಕರ ಅಮಾನತು’ ಆದೇಶ ಹಿಂಪಡೆಯಲು ಸ್ಪೀಕರ್ ಗೆ ಮನವಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ನಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ. ನಮ್ಮ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಸ್ಪೀಕರ್ ಗೆ ಮನವಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಶನಿವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತು ಸ್ಪೀಕರ್ ತೆಗೆದುಕೊಂಡ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಿಕ, ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನವಾಗಿದೆ ಎಂದು ಹೇಳಿದರು.
ಸ್ಪೀಕರ್ ನಮ್ಮ ರಕ್ಷಣೆಗೆ ಬರಬೇಕಿತ್ತು. 6 ತಿಂಗಳು 18 ಜನಪ್ರತಿನಿಧಿಗಳನ್ನು ಅಮಾನತು ಮಾಡಿದ್ದು ಸರಿಯಲ್ಲ. ಅಮಾನತಾದವರು ವಿಧಾನಸಭಾ ಲಾಬಿ, ಸಭಾಂಗಣ ಪ್ರವೇಶಿಸುವಂತಿಲ್ಲ ಎಂದಿದ್ದಾರೆ. ಅವರೇನು ಭಯೋತ್ಪಾದಕರೇ, ನಕ್ಸಲರೇ? ಎಂದು ಪ್ರಶ್ನಿಸಿದ ವಿಜಯೇಂದ್ರ, ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದು ಶಾಸಕರ ಹಕ್ಕು ಮೊಟಕುಗೊಳಿಸುವ, ಹಕ್ಕು ಕಿತ್ತುಕೊಳ್ಳುವ ಕಾರ್ಯ ಎಂದರು.
ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ ಅಸಾಂವಿಧಾನಿಕ. ಇದನ್ನು ನಾವು ವಿರೋಧಿಸುತ್ತೇವೆ. ಈ ಸಂಬಂಧ ಹೋರಾಟದ ಕುರಿತು ಪಕ್ಷದ ಮುಖಂಡರ ಜೊತೆ ಚರ್ಚಿಸಿದ್ದೇವೆ. ಅತಿ ಶೀಘ್ರದಲ್ಲಿ ಹೋರಾಟದ ರೂಪುರೇಷೆಯನ್ನು ಪ್ರಕಟಿಸುತ್ತೇವೆ. ಜಿಲ್ಲೆಗಳಲ್ಲಿ ಸೋಮವಾರದಿಂದ ಹೋರಾಟ ನಡೆಯಲಿದೆ. ರಾಜ್ಯದಲ್ಲಿ ಜನಜಾಗೃತಿ ಮೂಡಿಸುವ ಹೋರಾಟ ನಡೆಸಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಹನಿಟ್ರ್ಯಾಪ್ ಕುರಿತ ಸಚಿವರ ಹೇಳಿಕೆ ಹಾಗೂ ಮುಸ್ಲಿಮರಿಗೆ ಸಂವಿಧಾನವಿರೋಧಿಯಾಗಿ ಮೀಸಲಾತಿ ವಿಚಾರ ಮುಂದಿಟ್ಟು ನಾವು ಹೋರಾಟ ಮಾಡಿದ್ದೇವೆ. ಸ್ಪೀಕರ್ ನಡವಳಿಕೆ ತುಘಲಕ್ ದರ್ಬಾರ್ ನಂತಿದೆ. ಸಿದ್ದರಾಮಯ್ಯ ಈ ಹಿಂದೆ ಬೂಟುಗಾಲಲ್ಲಿ ಸದನ ಬಾಗಿಲಿಗೆ ಒದ್ದಿದ್ದು, ಝಮೀರ್ ಅಹ್ಮದ್ ಸ್ಪೀಕರ್ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆಸಿದ್ದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.