ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-09-30 17:02 GMT

ಬೆಂಗಳೂರು, ಸೆ.30: ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಶನಿವಾರ ನಗರದ ಎಚ್.ಬಿ.ಆರ್.ಲೇಔಟ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಜೊತೆಗೆ, ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂಬ ಎರಡು ಬೇಡಿಕೆಗಳನ್ನು ಮರು ಪರಿಶೀಲನಾ ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವ ಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮದವರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News