ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಉಪ ಚುನಾವಣೆ: ಮತದಾನ ಆರಂಭ
ಬೆಂಗಳೂರು: ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. 9 ಗಂಟೆ ವೇಳೆ 10.14 ಶೇ. ಮತದಾನವಾಗಿದೆ.
ಈ ಮೂರೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆಯಿದೆ.
ಚನ್ನಪಟ್ಟಣ:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ನೇರ ಸ್ಪರ್ಧೆಯಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,32,949 ಮತದಾರರಿದ್ದಾರೆ. ಇಂದು ಬೆಳಗ್ಗೆಯಿಂದ 276 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 9 ಗಂಟೆಯವರೆಗೆ ಶೇ10.34 ಮತದಾನವಾಗಿದೆ.
ಶಿಗ್ಗಾಂವಿ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಯಾಸೀರ್ ಖಾನ್ ಪಠಾಣ್ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಾ ಕಣದಲ್ಲಿದ್ದಾರೆ.
ಈ ಕ್ಷೇತ್ರದ ಒಟ್ಟು 2,37,525 ಮತದಾರರಿದ್ದಾರೆ. ಇಲ್ಲಿ ಒಟ್ಟು 241 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಬೆಳಗ್ಗೆ 9 ಗಂಟೆ ವೇಳೆ 10.08 ಶೇ. ಮತದಾನವಾಗಿದೆ.
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ಧಾಮ ಜೈನ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸಂಡೂರು
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸಂಸದ ಇ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಕಣದಲ್ಲಿದ್ದಾರೆ.
ಈ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದು, ಇಂದು ಬೆಳಗ್ಗೆಯಿಂದ ಒಟ್ಟ 253 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 9 ಗಂಟೆ ವೇಳೆ 9.99. ಶೇ. ಹಕ್ಕು ಚಲಾವಣೆಯಾಗಿದೆ.