ಬೆಂಗಳೂರಿನಲ್ಲಿ ಎರಡನೇ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ : ಕನಕಪುರ ರಸ್ತೆಯಲ್ಲಿರುವ ಎರಡು ತಾಣ ವೀಕ್ಷಿಸಿದ ಎಎಐ ಅಧಿಕಾರಿಗಳ ತಂಡ

Update: 2025-04-08 21:25 IST
ಬೆಂಗಳೂರಿನಲ್ಲಿ ಎರಡನೇ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ : ಕನಕಪುರ ರಸ್ತೆಯಲ್ಲಿರುವ ಎರಡು ತಾಣ ವೀಕ್ಷಿಸಿದ ಎಎಐ ಅಧಿಕಾರಿಗಳ ತಂಡ
  • whatsapp icon

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸಮೀಪ ಉದ್ದೇಶಿತ ಎರಡನೇ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ(ಎಎಐ)ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು.

ಆನಂತರ, ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್, ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು.

ನಾಳೆ ಈ ತಂಡ ನೆಲಮಂಗಲ-ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ. ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಪ್ರಾಧಿಕಾರದ ತಂಡದಲ್ಲಿ ಪ್ರಧಾನ ವ್ಯವಸ್ಥಾಪಕ ವಿಕ್ರಮ್ ಸಿಂಗ್, ಜಂಟಿ ಪ್ರಧಾನ ವ್ಯವಸ್ಥಾಪಕ ಕೆ.ಶ್ರೀನಿವಾಸರಾವ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷ್ ಕುಮಾರ್ ಭಾರತಿ, ಅಮನ್ ಚಿಪಾ ಉಪಸ್ಥಿತರಿದ್ದರು.

ರಾಜ್ಯ ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News