‘ಲೋಕಸಭಾ ಚುನಾವಣೆ’ ಟಿಕೆಟ್ ಹಂಚಿಕೆ ಅಸಮಾಧಾನ: ಬಿಜೆಪಿ ತೊರೆಯಲು ಸಜ್ಜಾದ ರಾಜ್ಯದ ಹಿರಿಯ ನಾಯಕರು?
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆಯಾದ ಬೆನ್ನಲ್ಲೆ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಬಹಿರಂಗ ಆಕ್ರೋಶ ಹೊರಹಾಕುತ್ತಿರುವ ಹಿರಿಯ ನಾಯಕರು, ಪಕ್ಷ ತೊರೆಯಲು ಸಜ್ಜಾಗುತ್ತಿರುವುದು ಕಂಡು ಬರುತ್ತಿದೆ.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿಗೆ ಕೈಕೊಟ್ಟು ವಿ.ಸೋಮಣ್ಣಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲು ಮಾಜಿ ಸಿಎಂ ಯಡಿಯೂರಪ್ಪ ಕಾರಣ. ಅವರಿಂದಲೆ, ನನಗೆ ಮೋಸ, ಅನ್ಯಾಯ ಆಗಿರುವುದು ಎಂದು ಬಹಿರಂಗ ಅಸಮಾಧಾನ ಹೊರಹಾಕಿರುವ ಮಾಧುಸ್ವಾಮಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ತೆರೆಮರೆಯ ಕಸರತ್ತು ಆರಂಭವಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮೂಲಕ ಮಾಧುಸ್ವಾಮಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯತ್ನ ಪಡುತ್ತಿದ್ದಾರೆ ಎನ್ನಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆ.ಸಿ. ಮಾಧುಸ್ವಾಮಿ, ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ವಿರುದ್ಧ ಪರಾಭವಗೊಂಡಿದ್ದರು.
ಅನಂತರ, ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಧುಸ್ವಾಮಿ ಬಯಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ವಿ.ಸೋಮಣ್ಣ ಅವರಿಗೆ ಮಣೆ ಹಾಕಿರುವುದು ಮಾಧುಸ್ವಾಮಿ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ, ತುಮಕೂರಿನಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಬಹಿರಂಗವಾಗಿಯೆ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ.
ಅದೇ ರೀತಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆಗೆ ಬಿಜೆಪಿ ಟಿಕೆಟ್ ನೀಡಿರುವುದರಿಂದ, ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿಯನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೂಲಕ ರಮೇಶ್ ಕತ್ತಿಯನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಥಳೀಯರ ವಿರೋಧ ಎದುರಿಸುತ್ತಿರುವ ಹಾಲಿ ಸಂಸದೆ ಶೋಭಾ ಕರಂದ್ಲಾಜೆಯನ್ನು ಕರೆ ತಂದು, ಬೆಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸಿರುವ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹಾಲಿ ಸಂಸದ ಡಿ.ವಿ. ಸದಾನಂದಗೌಡ ಅಸಮಾಧಾನ ಹೊರಹಾಕಿದ್ದಾರೆ.
ಇದೇ ರೀತಿ, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಅವರ ಬೆಂಬಲಿಗರು, ಹಿತೈಷೆಗಳು ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಹಾಲಿ ಸಂಸದ ಸಿದ್ದೇಶ್ವರ ತಮ್ಮ ಬದಲು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿರುವುದು ಸ್ಥಳೀಯ ಬಿಜೆಪಿ ನಾಯಕರಲ್ಲಿ ಅಸಮಾಧಾನ ಮನೆ ಮಾಡುವಂತೆ ಆಗಿದೆ.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಯಾವುದೆ ಕಾರಣಕ್ಕೂ ದಾವಣಗೆರೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಸಿದ್ದೇಶ್ವರ್ ವಿರುದ್ಧ ಕಿಡಿಗಾರಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಪ್ರತಾಪ್ ಸಿಂಹ ಬದಲು ರಾಜವಂಶಸ್ಥ ಯದುವೀರ್‍ಗೆ ಬಿಜೆಪಿ ಟಿಕೆಟ್ ನೀಡಿದೆ. ಅಲ್ಲಿಯೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿಯುವುದಾಗಿ ಘೋಷಿಸುವ ಮೂಲಕ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ರಣಕಹಳೆ ಮೊಳಗಿಸಿದ್ದಾರೆ.