ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಇಂಧನ ಸಚಿವ ಕೆ.ಜೆ.ಜಾರ್ಜ್

Update: 2023-12-23 12:50 GMT

ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್ ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ಅವಧಿಯಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರಕಾರ ಯೋಚಿಸಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಈಗಾಗಲೆ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ. ವಿವಿಧ ಹುದ್ದೆಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವವರನ್ನು ಒಳಗುತ್ತಿಗೆಗೆ ಒಳಪಡಿಸುವ ಕುರಿತು ನಿಯಮಗಳಲ್ಲಿ ಅವಕಾಶಗಳಿರುವ ಬಗ್ಗೆ ಪರಿಶೀಲಿಸಿ ಇದೇ ಡಿ.29ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಜಾರ್ಜ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News