ಲೈಂಗಿಕ ದೌರ್ಜನ್ಯ ಪ್ರಕರಣ | ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಜಾಮೀನು ಮಂಜೂರು
ಬೆಂಗಳೂರು : ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಸೋಮವಾರ ಕಾಯ್ದಿರಿಸಲಾಗಿದ್ದ ಆದೇಶವನ್ನು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ (42ನೆ ಎಸಿಎಂಎಂ ಕೋರ್ಟ್) ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‍ಐಆರ್ ನಲ್ಲಿ ಮೊದಲನೆ ಆರೋಪಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿದರು.
5 ಲಕ್ಷ ಮೌಲ್ಯದ ಬಾಂಡ್, ಇಬ್ಬರ ಭದ್ರತೆ ಒದಗಿಸುವುದು, ತನಿಖಾಧಿಕಾರಿಗೆ ಸಹಕಾರ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಏನಿದು ಪ್ರಕರಣ?: ಮೇ.17ರಂದು ಎಚ್.ಡಿ. ರೇವಣ್ಣ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಶರಣಾಗಿ ಜಾಮೀನು ಕೋರಿದ್ದರು. ಆಗ ಕೋರ್ಟ್ 5 ಲಕ್ಷ ರೂ. ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ರೇವಣ್ಣ ಶರಣಾಗಿ ಮಧ್ಯಂತರ ಜಾಮೀನು ಪಡೆದ ಬಳಿಕ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯನ್ನು ಪುರಿಸ್ಕರಿಸಿರುವ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಇನ್ನೂ, ರೇವಣ್ಣ ಜಾಮೀನು ಅರ್ಜಿಗೆ ಎಸ್‍ಪಿಪಿ ಜಯನಾ ಕೊಠಾರಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಎರಡು ಬಾರಿ ನೋಟಿಸ್ ನೀಡಿದರೂ ಸಹ ಆರೋಪಿ ವಿಚಾರಣೆಗೆ ಆಗಮಿಸಿಲ್ಲ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಕೋರ್ಟ್‍ನಲ್ಲಿ ವಾದಿಸಿದ್ದರು.
ಮೈಸೂರು ಜಿಲ್ಲೆಯ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯು ಮಾಜಿ ಸಚಿವ ಎಚ್. ಡಿ. ರೇವಣ್ಣ ಬಂಧಿಸಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಚ್.ಡಿ. ರೇವಣ್ಣ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.
ಅಲ್ಲದೆ, ಎಪ್ರಿಲ್ 28ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಮನೆಗೆಲಸದಾಕೆಯು ಮಾಜಿ ಸಚಿವ ಎಚ್.ಡಿ.ರೇವಣ್ಣ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದೆ.
ಪ್ರೊ.ರವಿವರ್ಮ ಕುಮಾರ್ ನೇಮಕ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ಗೆ ಸಲ್ಲಿಕೆಯಾಗುವ ಪ್ರಕರಣಗಳಲ್ಲಿ ಸಿಐಡಿ ಪರವಾಗಿ ವಾದ ಮಂಡಿಸಲು ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಈ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸರಕಾರ ಅಥವಾ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದಲ್ಲಿ ಆ ಪ್ರಕರಣಗಳ ಕುರಿತು ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.