ಮಂಡ್ಯ | ಲೈಂಗಿಕ ಕಿರುಕುಳ ಆರೋಪ: ಮುಖ್ಯ ಶಿಕ್ಷಕನ ಬಂಧನ
ಮಂಡ್ಯ, ಸೆ.17: ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವರಾಂ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮದ್ದೂರು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಶಿಕ್ಷಕ ಶಾಲೆಯಲ್ಲಿ ಪ್ರತಿನಿತ್ಯ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ವಿಷಯ ತಿಳಿದ ಪೋಷಕರು ದಲಿತ ಸಂಘಟನೆಗಳ ಸಹಕಾರದೊಂದಿಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಮುಖ್ಯಶಿಕ್ಷಕ ಶಿವರಾಂನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಿದ್ದು, ಲೈಂಗಿಕ ಕಿರುಕುಳದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಪ್ರಕರಣ ಕುರಿತು ವರದಿ ನೀಡಿದ್ದಾರೆ ಎನ್ನಲಾಗಿದೆ.