ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕ: ಸಿಎಂ ಸಿದ್ದರಾಮಯ್ಯ

Update: 2024-02-05 09:28 GMT

ಬೆಂಗಳೂರು, ಫೆಬ್ರವರಿ 05 : ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಬಸ್ಸುಗಳ(ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು.

ಎಲ್ಲ ಜಾತಿ ಧರ್ಮಗಳ ಬಡವರಿಗೆ ಪಕ್ಷಾತೀತ, ಜಾತ್ಯಾತೀತವಾಗಿ ಎಲ್ಲ ಮಹಿಳೆಯರಿಗೂ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಹಿಂದೆ ಯಾವ ಸರ್ಕಾರದವರು ಇಂತಹ ಪ್ರಯತ್ನ ಕೈಗೊಂಡಿರಲಿಲ್ಲ. ಪ್ರದಾನಿ ಮೋದಿಯವರೂ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ತಾವು 10 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಇಂತಹ ಗ್ಯಾರಂಟಿಗಳನ್ನು ಜನರಿಗೆ ನೀಡಲಿಲ್ಲ‌ ಎಂದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿದೆ. ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕೂಡ 3800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದೆ ಎಂದರು.

ಸಿಬ್ಬಂದಿಗೆ ವಿಮಾ ಸೌಲಭ್ಯ:

ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕ.ರ.ಸಾ.ಸಂ ಅಧ್ಯಕ್ಷ ಗೋಪಿ ಶ್ರೀನಿವಾಸ್ , ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News