ಶಿವಮೊಗ್ಗ ಘಟನೆ | 43 ಜನರ ಬಂಧನ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ʼʼಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ಎಸೆದಿದ್ದು, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂದಿಸಿದ್ದು ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಇಂತಹ ಕೃತ್ಯಗಳನ್ನು ಖಂಡಿತಾ ಹತ್ತಿಕ್ಕುತ್ತೇವೆʼʼ ಎಂದು ಹೇಳಿದ್ದಾರೆ.
ʼʼಶಿವಮೊಗ್ಗ ನಗರ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡಿದ್ದರಿಂದ ನಗರದಲ್ಲಿ ಶಾಂತಿ ನೆಲೆಸಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆʼʼ ಎಂದು ಅವರು ಮಾಹಿತಿ ನೀಡಿದ್ದಾರೆ.
ನಿಷೇಧಾಜ್ಞೆ ಜಾರಿ
ಮುಂಜಾಗ್ರತ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿದ ಬೆನ್ನಲ್ಲೇ ನಗರದಾದ್ಯಂತ ಅಂಗಡಿಮುಗ್ಗಟ್ಟುಗಳನ್ನು ಬಂದ್ ಮಾಡಿಸಲಾಗುತ್ತಿದೆ.