ಪಕ್ಷದ ಶಿಸ್ತು ಉಲ್ಲಂಘನೆ ಆರೋಪ : ಶಿವರಾಮ್ ಹೆಬ್ಬಾರ್, ಸೋಮಶೇಖರ್ ಸೇರಿ ಐವರಿಗೆ ಬಿಜೆಪಿ ಶೋಕಾಸ್ ನೋಟಿಸ್

ಶಿವರಾಮ್ ಹೆಬ್ಬಾರ್/ ಎಸ್.ಟಿ.ಸೋಮಶೇಖರ್
ಬೆಂಗಳೂರು : ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಐವರಿಗೆ ಪಕ್ಷದ ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಶಿಸ್ತಿನ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪಗಳಡಿಯಲ್ಲಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪಗಳ ಆಧರಿಸಿ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಬಿ.ಪಿ.ಹರೀಶ್ ಹಾಗೂ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ಮತ್ತು ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, 72 ಗಂಟೆಗಳೊಳಗೆ ಆರೋಪಗಳ ಬಗ್ಗೆ ಉತ್ತರ ನೀಡಬೇಕು. ಗಡುವಿನೊಳಗೆ ಉತ್ತರ ನೀಡದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ಮೇಲೆ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಇನ್ನು ಬಿ.ವೈ.ವಿಜಯೇಂದ್ರ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೂ ಸಹ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪಗಳ ಮೇರೆಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ನೀಡಿ 72 ಗಂಟೆಗಳ ಅವಧಿಯಲ್ಲಿ ಉತ್ತರಿಸುವಂತೆ ಸೂಚಿಸಿದೆ. ಈ ಇಬ್ಬರೂ ಮುಖಂಡರು ಮಾಜಿ ಸಚಿವ ಯತ್ನಾಳ್ ವಿರುದ್ಧ ಸಭೆ ನಡೆಸಿದ ಹಾಗೂ ಯತ್ನಾಳ್ ಬಗ್ಗೆ ಕಟುಟೀಕೆ ಮಾಡಿದ ಆರೋಪಗಳ ಕುರಿತು ಕಾರಣ ಕೇಳಿ ನೋಟಿಸ್ ನೀಡಲಾಗಿದೆ.