ಪೆರಿಫೆರಲ್ ರಿಂಗ್ ರಸ್ತೆ ಕುರಿತು ಸಂಪನ್ಮೂಲ ಪರಿಶೀಲಿಸಿ, ಪ್ರಸ್ತಾವ ಸಲ್ಲಿಸಲು ಸಿಎಂ ಸೂಚನೆ
ಬೆಂಗಳೂರು : ನಗರದ ಪೆರಿಫೆರಲ್ ರಿಂಗ್ ರಸ್ತೆ ಕುರಿತಾಗಿ ನಾಲ್ಕೈದು ಬಾರಿ ಟೆಂಡರ್ ಕರೆದರೂ ವಿಫಲವಾಗಿದೆ. ಹೀಗಾಗಿ ರಸ್ತೆ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢಿಕರಣದ ಅವಕಾಶಗಳನ್ನು ಪರಿಶೀಲಿಸಿ ವಿವರವಾದ ಪ್ರಸ್ತಾವವನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ಅಭಿವೃದ್ಧಿ ಕುರಿತು ಬೆಂಗಳೂರು ಅಭಿವೃದ್ಧಿ ಸಚಿವ, ನಗರದ ಶಾಸಕರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಆಯವ್ಯಯದಲ್ಲಿ ಘೋಷಿಸಿದಂತೆ ಸಂಚಾರ ದಟ್ಟಣೆ ನಿವಾರಣೆಗೆ ಟನೆಲ್ ರಸ್ತೆಗಳ ನಿರ್ಮಾಣ ಅಭಿವೃದ್ಧಿಗೆ ಸಿದ್ಧತೆ ನಡೆಸಬೇಕು. ನಗರದಲ್ಲಿ ವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ ಮತ್ತು ರಾಜಕಾಲುವೆಗಳ ಬಫರ್ ಜೋನ್ ನಲ್ಲಿ ರಸ್ತೆಗಳ ನಿರ್ಮಾಣಕ್ಕೆ ಪ್ರಸ್ತಾವಗಳನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಪೆರಿಫೆರಲ್ ರಿಂಗ್ ರಸ್ತೆ, ಸ್ಕೈಡೆಕ್ ನಿರ್ಮಾಣ, ಘನ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗಾಗಿ ಟನೆಲ್ ರಸ್ತೆ ನಿರ್ಮಾಣ ಹಾಗೂ ಹೈ ಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.
ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಚಾರ್ಜ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.