ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರಮಟ್ಟದಲ್ಲಿ ಎಸ್‍ಸಿಎಸ್‍ಪಿ-ಟಿಎಸ್‍ಪಿ ಕಾಯ್ದೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು

Update: 2024-09-27 15:41 GMT
ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರಮಟ್ಟದಲ್ಲಿ ಎಸ್‍ಸಿಎಸ್‍ಪಿ-ಟಿಎಸ್‍ಪಿ ಕಾಯ್ದೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು
  • whatsapp icon

ಬೆಂಗಳೂರು: ‘ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’ ಎಂದು ಆರೋಪಿಸುತ್ತಿರುವ ಪ್ರಧಾನಿ ಮೋದಿ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಉಪಯೋಜನೆ(ಎಸ್‍ಸಿಎಸ್‍ಪಿ-ಟಿಎಸ್‍ಪಿ)ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಶುಕ್ರವಾರ ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಎಸ್‍ಸಿಎಸ್‍ಪಿ/ಟಿಎಸ್‍ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.

ಪ್ರಸಕ್ತ ಸಾಲಿನ ನಮ್ಮ ಸರಕಾರದ ಬಜೆಟ್ ಗಾತ್ರ 3,71,383 ಕೋಟಿ ರೂ., ಅದರಲ್ಲಿ 39,121 ಕೋಟಿ ರೂ.ಗಳನ್ನು ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರಕಾರದ ಬಜೆಟ್ 48.21 ಲಕ್ಷ ಕೋಟಿ ರೂ.ಆಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ 2,90,401 ಕೋಟಿ ರೂ.ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರಕಾರದ ದಲಿತ ಕಾಳಜಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‍ಸಿಎಸ್‍ಪಿ/ಟಿಎಸ್‍ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೆ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ 8,616 ಕೋಟಿ ರೂ. ಆಗಿದ್ದರೆ, ಎಸ್‍ಸಿಎಸ್‍ಪಿ/ಟಿಎಸ್‍ಪಿ ಕಾಯ್ದೆ ಜಾರಿಯಾದ ವರ್ಷ(2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ 15,894 ಕೋಟಿ ರೂ., ಈ ಮೊತ್ತ ಈಗ ಹೆಚ್ಚು ಕಡಿಮೆ 40 ಸಾವಿರ ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇಷ್ಟು ಮಾತ್ರವಲ್ಲ, ನಮ್ಮ ಸರಕಾರ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರಕಾರಿ ಗುತ್ತಿಗೆಗಳಲ್ಲಿ ಎಸ್‍ಸಿ ಮತ್ತು ಎಸ್‍ಟಿ ಸಮುದಾಯದ ಗುತ್ತಿಗೆದಾರರಿಗೆ ಶೇ.24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‍ಸಿ/ಎಸ್‍ಟಿ ಕುಟುಂಬಗಳಿಗೆ ಸರಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇ.75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ. ಕರ್ನಾಟಕದಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನರೇಂದ್ರ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News