ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಹುಬ್ಬಳ್ಳಿ: ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಲಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಾದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ತಂಡ ಭೇಟಿ ನೀಡಿರುವ ಬಗ್ಗೆ ಶನಿವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಮಹಿಳೆಯ ಮೇಲೆ ದೌರ್ಜನ್ಯವಾಗಿದ್ದು, ಸರಕಾರ ಕಾನೂನು ರೀತಿಯ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಗೃಹ ಸಚಿವರು ಆಸ್ಪತ್ರೆಯಲ್ಲಿ ಸಂತ್ರಸ್ಥೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಸಂತ್ರಸ್ತೆಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ರಾಜಕಾರಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನ್ಯಾಷನಲ್ ಕ್ರೈಂ ಬ್ಯೂರೋ ಪ್ರಕಾರ ಬಿಜೆಪಿ ಅವಧಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆದಿವೆ. ಉತ್ತರಪ್ರದೇಶದ ಬಿಜೆಪಿಯ ಶಾಸಕರೊಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ ನ್ಯಾಯಾಲಯ 25 ವರ್ಷ ಜೈಲುಶಿಕ್ಷೆ ವಿಧಿಸಿದೆ. ಇದರ ಬಗ್ಗೆ ನಡ್ಡಾ ಪ್ರತಿಕ್ರಿಯೆ ಏನು ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.
ನಿಜ ಹೇಳುವುದು ರಾಜಕೀಯವಲ್ಲ: ಹೊಸದಿಲ್ಲಿಯ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ಸಂಸತ್ತಿನ ವಿಪಕ್ಷಗಳು ರಾಜಕೀಯ ಮಾಡುತ್ತಿರುವುದಾಗಿ ಬಿಜೆಪಿ ನಾಯಕರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಸಂಸತ್ತಿನಲ್ಲಿ ಭದ್ರತಾ ಲೋಪವಾಗಿರುವುದು ಸತ್ಯ. ನಿಜವನ್ನು ಹೇಳಿದರೆ ರಾಜಕೀಯವಾಗುವುದಿಲ್ಲ ಎಂದರು.
ಬಿಜೆಪಿಯವರಿಗೆ ಬುದ್ದಿ ಕಡಿಮೆ: ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ತಂತ್ರ ಮಾಡಿರುವುದಾಗಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂಥ್ರಿ, ಜನರು ಹೇಳಿದಂತೆ ಅಭ್ಯರ್ಥಿಗಳು ಚುನಾವಣೆಗೆ ನಿಲ್ಲುವ ಅಥವಾ ನಿಲ್ಲದಿರುವ ತೀರ್ಮಾನವನ್ನು ಕೈಗೊಳ್ಳುತ್ತಾರೆ. ಲೆಹರ್ ಸಿಂಗ್ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಈ ರೀತಿ ಯೋಚಿಸುವ ಬಿಜೆಪಿಯವರಿಗೆ ಬುದ್ಧಿ ಕಡಿಮೆ ಇರಬಹುದು ಎಂದರು.