ಹೈಕಮಾಂಡ್ ಭೇಟಿ ಮಾಡಿದ ಸಿಎಂ-ಡಿಸಿಎಂ | ಮುಡಾ, ವಾಲ್ಮೀಕಿ ಹಗರಣ ಕುರಿತು ಸ್ಪಷ್ಟನೆ

Update: 2024-07-30 16:31 GMT

PC : x/@kharge

ಹೊಸದಿಲ್ಲಿ : ರಾಜ್ಯ ಸರಕಾರದ ವಿರುದ್ಧ ಕೇಳಿ ಬಂದಿರುವ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಅಕ್ರಮ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟೀಕರಣ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲೆಗಳ ಸಹಿತ ವಿವರಣೆ ನೀಡಿದ್ದಾರೆ ಎಂದು ಹೇಳಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಬಿ.ನಾಗೇಂದ್ರ ಅವರದ್ದು ಏನು ತಪ್ಪಿಲ್ಲ. ಇದರ ಹಿಂದೆ ನಿಗಮದ ಹಾಗೂ ಬ್ಯಾಂಕಿನ ಅಧಿಕಾರಿಗಳಿದ್ದಾರೆ. ಈ ಸಂಬಂಧ ಎಸ್‍ಐಟಿ ರಚನೆ ಮಾಡಿದ್ದು, ಸಮಗ್ರವಾಗಿ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ, ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿರುವ ನಿಗಮದ ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ ಎಂದು ಉಭಯ ನಾಯಕರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಆದರೂ, ಕೇಂದ್ರ ಸರಕಾರವು ಈ.ಡಿ. ಅಧಿಕಾರಿಗಳ ಮೂಲಕ ಸರಕಾರವನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಇಡೀ ಪ್ರಕರಣವನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದೆ. ರಾಜ್ಯ ಸರಕಾರವು ಈ ವಿಚಾರದಲ್ಲಿ ಹೋರಾಟವನ್ನು ನಡೆಸಿದೆ ಎಂದು ಮುಖ್ಯಮಂತ್ರಿ ಗಮನ ಸೆಳೆದಿದ್ದಾರೆ ಎನ್ನಲಾಗಿದೆ.

ಮುಡಾದಿಂದ ತಮ್ಮ ಪತ್ನಿಗೆ ಕಾನೂನು ಪ್ರಕಾರವೇ ನಿವೇಶನಗಳು ಹಂಚಿಕೆಯಾಗಿವೆ. ಅದರಲ್ಲೂ, ನಾನು ಅಧಿಕಾರದಲ್ಲಿ ಇರುವಾಗ ಈ ನಿವೇಶನಗಳು ಹಂಚಿಕೆಯಾಗಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ನಿವೇಶನಗಳ ಹಂಚಿಕೆಯಾಗಿದೆ. ಬಿಜೆಪಿ ಹಾಗೂ ಜೆಡಿಎಸ್‍ನವರು ರಾಜಕೀಯ ಉದ್ದೇಶಕ್ಕಾಗಿ ನನ್ನ ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವರಿಷ್ಠರ ಗಮನ ಸೆಳೆದಿದ್ದಾರೆ.

ಆದರೂ, ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚನೆ ಮಾಡಿ, ಆರು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರಕಾರವು ಯಾವುದೇ ಕಾರಣಕ್ಕೂ ಯಾವುದೆ ರೀತಿಯ ಭ್ರಷ್ಟಾಚಾರ, ಅಕ್ರಮಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಉಭಯ ನಾಯಕರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಲು ನೇಮಿಸಲಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮದುಸೂಧನ್ ಮಿಸ್ತ್ರಿ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಮುಂದಿಟ್ಟುಕೊಂಡು, ರಾಜ್ಯದಲ್ಲಿ ರಾಜ್ಯದಲ್ಲಿ 135 ಜನ ಕಾಂಗ್ರೆಸ್ ಶಾಸಕರು ಇದ್ದರೂ ನಿರೀಕ್ಷಿಸಿದಷ್ಟು ಸ್ಥಾನಗಳನ್ನು ಗೆಲ್ಲಲು ಯಾಕೆ ಸಾಧ್ಯವಾಗಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಕೆಲವು ಸಚಿವರು ಸಮರ್ಪಕವಾಗಿ ಕೆಲಸ ಮಾಡಿಲ್ಲ. ಅಲ್ಲದೇ, ಹಲವು ಕಡೆ ಶಾಸಕರು, ಅಭ್ಯರ್ಥಿಗಳಿಗೆ ಸಂಪೂರ್ಣ ಸಹಕಾರವನ್ನು ನೀಡಿಲ್ಲ. ಕೆಲವು ಕ್ಷೇತ್ರಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳು ನಡೆದಿರುವ ಬಗ್ಗೆ ಉಭಯ ನಾಯಕರು, ವರಿಷ್ಠರ ಗಮನ ಸೆಳೆದಿದ್ದಾರೆ ಎನ್ನಲಾಗಿದೆ.

ಈ ಚರ್ಚೆ ಸಂದರ್ಭದಲ್ಲಿ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News