ಯುಪಿಎಸ್‍ಸಿ ಮಾದರಿಯಲ್ಲಿ ಕೆಪಿಎಸ್‍ಸಿ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

Update: 2024-09-25 14:15 GMT

Photo:X/@CMofKarnataka

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ)ಯಲ್ಲಿ ಯುಪಿಎಸ್‍ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸರಕಾರದ ವತಿಯಿಂದ ನಡೆದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.

ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕಗಳು ಸರಿಹೊಂದುವಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಿದ್ದರಾಮಯ್ಯ ವಿವರಿಸಿದರು.

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಬೇಕು. ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕು. ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಈಶ್ವರ್ ಖಂಡ್ರೆ, ಕೆ.ಸುಧಾಕರ್, ಡಾ.ಎಂ.ಸಿ.ಸುಧಾಕರ್, ಎನ್.ಎಸ್.ಭೋಸರಾಜು, ರಹೀಂ ಖಾನ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News