ಶಕ್ತಿ ಯೋಜನೆ ಜಾರಿಗೊಂಡ ದಿನ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಸಂಗವ್ವರನ್ನು ಭೇಟಿಯಾದ ಸಿದ್ದರಾಮಯ್ಯ; ವೀಡಿಯೊ ಹಂಚಿಕೊಂಡ ಕಾಂಗ್ರೆಸ್

Update: 2023-09-04 18:11 GMT

Photo - twitter-@siddaramaiah

ಬೆಂಗಳೂರು: ಶಕ್ತಿ ಯೋಜನೆ ಜಾರಿಗೊಂಡ ದಿನ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಹತ್ತಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದ ಅಜ್ಜಿ ಸಂಗವ್ವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. 

ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸುವ ಶಕ್ತಿಯೋಜನೆ ಜಾರಿ ಮಾಡಿದಾಗ (ಜೂ.11) ಬೆಳಗಾವಿಯ ಸಂಗವ್ವ ಅವರು ಉಚಿತ ಪ್ರಯಾಣ ಮಾಡುವಾಗ ಸರಕಾರಿ ಬಸ್ ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿ ಹತ್ತುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಸಂಗವ್ವ ಅವರಿಗೆ ಕಲರ್ಸ್ ಕನ್ನಡ ವಾಹಿನಿಯ ʼಅನುಬಂಧʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ.

ಈ ಸಂಬಂಧ ಟ್ವಿಟರ್‌ ನಲ್ಲಿ ರಾಜ್ಯ ಯುವ ಕಾಂಗ್ರೆಸ್‌ ಘಟಕ (@IYCKarnataka) ವೀಡಿಯೊ ಹಂಚಿಕೊಂಡಿದ್ದು, ಸಿದ್ದರಾಮಯ್ಯ ಅವರು  ಸಂಗವ್ವ ಅವರನ್ನು ನೋಡಿ ಖುಷಿ ಪಟ್ಟಿದ್ದಾರೆ.

ʼʼಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ನನ್ನಲ್ಲಿ ಭರವಸೆ ಮೂಡಿತ್ತುʼʼ

ʼʼಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು. ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತುʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News