ಸಿದ್ದರಾಮಯ್ಯ ಹದಿನಾಲ್ಕನೆ ಬಜೆಟ್, ಶಕ್ತಿ ಯೋಜನೆಗೆ ವೀರೇಂದ್ರ ಹೆಗ್ಗಡೆ ಮೆಚ್ಚುಗೆ
ಬೆಂಗಳೂರು, ಜು. 13: ‘ರಾಜ್ಯದಲ್ಲಿ ಹದಿನಾಲ್ಕನೆ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು, ರಾಜ್ಯ ಸರಕಾರದ ‘ಶಕ್ತಿ’ ಯೋಜನೆಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗುರುವಾರ ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಅನೇಕ ಯೋಜನೆಗಳ ಮೂಲಕ ಸಿದ್ದರಾಮಯ್ಯ ಅವರು ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದು, ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸಿದ್ದು, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
‘ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು, ತಮಗೆ ಅವಕಾಶವಿದ್ದಾಗ ಕ್ಷೇತ್ರಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕು ಎಂದು ಡಿ.ವೀರೇಂದ್ರ ಹೆಗ್ಗಡೆ ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.