CRZ ನಿಯಮಾವಳಿ ಸರಳೀಕರಣ ; ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ: ಸಚಿವ ಕೃಷ್ಣ ಬೈರೇಗೌಡ

Update: 2024-02-20 15:53 GMT

ಬೆಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರಾವಳಿ ನಿಯಂತ್ರಣಾ ವಲಯ (ಸಿಆರ್ ಝೆಡ್) ನಿಯಮಾವಳಿಗಳನ್ನು ಸರಳೀಕರಣ ಮಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಮಂಗಳವಾರ ವಿಧಾನಸಭೆಯ ಪ್ರಶ್ನೋತರ ಕಲಾಪದಲ್ಲಿ ಬಿಜೆಪಿ ಸದಸ್ಯ ಗುರುರಾಜ ಶೆಟ್ಟಿ ಗಂಟಿಹೊಳೆ ಕೇಳಿದ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರ ಪರವಾಗಿ ಉತ್ತರಿಸಿದ ಅವರು, ಸಿಆರ್ ಝೆಡ್ ನಿಯಮಾವಳಿಗಳಿಂದ ಕರಾವಳಿ ಭಾಗದ ಅಭಿವೃದ್ಧಿಗೆ ಏನು ತೊಂದರೆಯಾಗಿದೆ ಎಂಬುದರ ಕುರಿತು ವರದಿ ತರಿಸಿಕೊಂಡು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಬಸವರಾಜ ಬೊಮ್ಮಾಯಿ, ಕರಾವಳಿ ಅಭಿವೃದ್ಧಿ ಕುರಿತು ನಾವು ಮಾಡಿದ್ದ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಸಿಆರ್ ಝೆಡ್ ನಿಯಮಾವಳಿಗಳನ್ನು ಸರಳೀಕರಣಗೊಳಿಸಲು ಅವಕಾಶವಿದೆ ಎಂದರು.

ಇದೇ ಸಂದರ್ಭದಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಸಿಆರ್ ಝೆಡ್ ಕಚೇರಿ ಬೆಂಗಳೂರಿನಲ್ಲಿದೆ. ನಮಗೆ ಏನಾದರೂ ಸಮಸ್ಯೆಗಳು ಉಂಟಾದರೆ ಚರ್ಚೆ ಮಾಡಲು ಬೆಂಗಳೂರಿಗೆ ಬರಬೇಕು. ಆದುದರಿಂದ, ಸಿಆರ್ ಝೆಡ್ ಕಚೇರಿಯನ್ನು ಮಂಗಳೂರಿಗೆ ಸ್ಥಳಾಂತರ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News