ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ, ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆಗಾಗಿ ಎಸ್‌ಐಟಿ ರಚನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಹಾಗೂ ಅಧಿಕಾರಿ ಚಂದ್ರಶೇಖರನ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಲು ವಿಶೇಷ ತನಿಖಾ ತಂಡ(ಎಸ್‍ಐಟಿ)ವನ್ನು ರಚಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಎಸ್‍ಐಟಿ ರಚಯಾಗಿದ್ದು, ತಂಡದಲ್ಲಿ ನಗರ ದಕ್ಷಿಣ ಸಂಚಾರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್, ಬೆಂಗಳೂರು ನಗರ ಗುಪ್ತವಾರ್ತೆಯ ಎಸ್ಪಿ ಹರಿರಾಮ್ ಶಂಕರ್, ಸಿಐಡಿ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ.ಹೆಗಡೆ ಇದ್ದಾರೆ. ತಂಡಕ್ಕೆ ಅಗತ್ಯಬಿದ್ದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನದ ಹಣವು ದುರುಪಯೋಗವಾಗಿರುವುದಾಗಿ ಆರೋಪಿಸಿ ಅಧೀಕ್ಷಕ ಚಂದ್ರಶೇಖರನ್ ಡೆತ್‍ನೋಟ್ ಬರೆದು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.
ಜೊತೆಗೆ ನಿಗಮದಲ್ಲಿ ಅನುದಾನ ಹಣವು ಯೂನಿಯನ್ ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ಆರೋಪಿಸಿ ಅಧಿಕಾರಿಯೊಬ್ಬರು ನೀಡಿದ ದೂರಿನನ್ವಯ ಬೆಂಗಳೂರಿನ ಹೈಗೌಂಡ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಕ್ರಿಮಿನಲ್ ಪ್ರಕರಣವೂ ದಾಖಲಾಗಿತ್ತು.
ಈ ಎರಡೂ ಪ್ರಕರಣಗಳನ್ನು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಸರಕಾರವು ಪರಿಗಣಿಸಿದೆ. ಈ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿಯುಳ್ಳ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಬೇಕು. ಇದರ ಮೇಲ್ವಿಚಾರಣೆಯನ್ನು ಸಿಐಡಿ ಡಿಜಿಪಿ ನಡೆಸಲಿದ್ದು, ಸಿಐಡಿಯಲ್ಲಿ ಲಭ್ಯವಿರುವ ಮಾನವ ಸಂಪನ್ಮೂಲ ಬಳಸಿಕೊಂಡು ತನಿಖೆ ನಡೆಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.