ಕೆಲ ಪಟ್ಟಭದ್ರ ಹಿತಾಸಕ್ತಿಗಳು ಧರ್ಮ, ಜಾತಿಯ ವಿಷಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ

Update: 2024-02-07 16:48 GMT

ಮೈಸೂರು: ಕೆಲ ಪಟ್ಟಭದ್ರ ಹಿತಾಸಕ್ತಿಗಳು ಧರ್ಮ ಮತ್ತು ಜಾತಿಯ ವಿಷಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಭಗವತ್ಪಾದರ ಜಾತ್ರಾ ಮಹೋತ್ಸವದಲ್ಲಿ ದೇಸಿ ಆಟ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಾದಿ ಶರಣರು 12ನೇ ಶತಮಾನದಲ್ಲೇ ಸಮಸಮಾಜ ನಿರ್ಮಾಣದ ಪ್ರತಿಪಾದನೆ ಮಾಡಿದರು. ನಾವು ಮನುಷ್ಯರು, ಮನುಷ್ಯ ಮನುಷ್ಯರ ನಡುವೆ ದ್ವೇಷ ಭಾವನೆ ಸರಿಯಲ್ಲ. ಎಲ್ಲರೂ ಹುಟ್ಟುವಾಗ ವಿಶ್ವಮಾನವರು, ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ. ಕೆಲವರು ಸಮಾಜದಲ್ಲಿ ವಿಷಬೀಜ ಬಿತ್ತಿ ಹಾಳು ಮಾಡುವ ಕೆಲಸ ಮಾಡುತ್ತಾರೆ. ಹಾಗಾಗಿ ಎಲ್ಲರೂ ಶಿಕ್ಷಣ ಪಡೆದು ಜಾತಿಯ ನಿರ್ಮೂಲನೆ ಮಾಡಬೇಕಿದೆ ಎಂದು ಹೇಳಿದರು.

ಸರ್ವಜನಾಂಗದ ಶಾಂತಿಯ ತೋಟದಂತೆ ಸಮಾಜ ಇರಬೇಕು ಎಂದು ಕುವೆಂಪು ಹೇಳಿದರು. ಕುವೆಂಪು ಅವರ ನುಡಿ ಸಾಕಾರ ಆಗಬೇಕಾದರೆ ಎಲ್ಲರೂ ಮನುಷ್ಯರಾಗಬೇಕು ಎಂದು ಹೇಳಿದರು.

ಜ್ಞಾನ ವಿಕಾಸ ಆಗಬೇಕು, ಜ್ಞಾನ ಯಾರದೇ ಸ್ವತ್ತಲ್ಲ. ಜ್ಞಾನ ಒಬ್ಬರ ಸ್ವತ್ತಾಗಿದ್ದರೆ ಅಂಬೇಡ್ಕರ್ ಸಂವಿಧಾನ ರಚಿಸಲು ಸಾಧ್ಯವಾತ್ತಿರಲಿಲ್ಲ. ವಾಲ್ಮೀಕಿ ರಾಮಾಯಣ ಬರೆಯಲು, ವ್ಯಾಸರು ಮಹಾಭಾರತವನ್ನು ಬರೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.

ಸಮಾಜದಲ್ಲಿ ಇನ್ನೂ ಸಮಾನತೆ ಬಂದಿಲ್ಲ. ಮೇಲು ಕೀಳು ಭಾವನೆ ಹೋಗಿಲ್ಲ. ಬರೀ ಓಟು ಹಾಕುವ ಸ್ವಾತಂತ್ರ್ಯ ಬಂದರೆ ಸಾಲದು. ಪ್ರತಿಯೊಬ್ಬರಿಗೂ ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಸ್ವಾತಂತ್ರ್ಯ ಬಂದಿರುವುದು ಸಾರ್ಥಕವಾಗಲಿದೆ ಎಂದರು.

ಸಂಪತ್ತು ಅಧಿಕಾರ ಒಬ್ಬರ ಕೈಲಿ ಕೇಂದ್ರೀಕೃತವಾಗಬಾರದು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಸಿಗುವಂತಾಗಬೇಕು. ಸಮಾರಂಭದ ವೇದಿಕೆಯಲ್ಲಿ ಒಕ್ಕಲಿಗರು, ಲಿಂಗಾಯತರು, ಕುರುಬನಾದ ನಾನು, ಹಿಂದುಳಿದ ವರ್ಗದವರು ಕುಳಿತಿದ್ದೇವೆ. ಇದಕ್ಕೆ ಸಂವಿಧಾನ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಪಾದಿಸಿದರು.

ಸಂವಿಧಾನ ನಮ್ಮೆಲ್ಲರನ್ನು ರಕ್ಷಣೆ ಮಾಡುತ್ತಿದೆ. ಕೆಲ ಪಟ್ಟಭದ್ರರು ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಬಸವಾದಿ ಶರಣರ ಆದರ್ಶಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ವೇದಿಕೆ ಮೇಲೆ ʼಇವನಾರಾವ ಇವನಾರವ ಇವ ನಮ್ಮವʼ ಎಂದು ಹೇಳಿ ವೇದಿಕೆಯಿಂದ ಕೆಳಗಿಳಿದ ನಂತರ ನೀನು ಯಾವ ಜಾತಿ ಎಂದು ಕೇಳುವ ಪರಿಪಾಠ ಸರಿಯಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಸುತ್ತೂರು ದೇಶಿ ಕೇಂದ್ರ ಸ್ವಾಮೀಜಿ , ಕರುಣಾದೇವಿ ಮಾತಾ, ಸಚಿವರುಗಳಾದ ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ,ಕೆ.ಜೆ.ಜಾಜ್, ಕೆ.ವೆಂಕಟೇಶ್, ಎಂ.ಸಿ.ಸುಧಾಕರ್, ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಸುನೀಲ್ ಬೋಸ್, ಚಂದ್ರಮೌಳಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News