ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾರೆಡ್ಡಿ ಪದಗ್ರಹಣ

Update: 2024-10-17 16:18 GMT

ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾಳಜಿ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಹೀಗಾಗಿ ಎಲ್ಲ ಜಾತಿ, ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೌಮ್ಯಾ ರೆಡ್ಡಿಯವರು ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ಪಕ್ಷವೇ ಬಹುಜನರ, ದುಡಿಯುವ ವರ್ಗಗಳ, ಶ್ರಮಿಕ ಸಂಸ್ಕøತಿಯ ವಿರೋಧಿ. ಮುಖ್ಯವಾಗಿ ಬಿಜೆಪಿ ಮಹಿಳಾ ಮೀಸಲಾತಿಯ, ಮಹಿಳಾ ಹಕ್ಕುಗಳ ವಿರೋಧಿ. ಇದನ್ನು ಸಮಸ್ತ ಮಹಿಳೆಯರಿಗೆ ಅರ್ಥ ಮಾಡಿಸುವ ಕೆಲಸವನ್ನು ಮಹಿಳಾ ಕಾಂಗ್ರೆಸ್ ಸಮಿತಿ ಮಾಡಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ರಾಜ್ಯದ 1.21 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡುತ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿದರು. ಆದರೆ, ಇವತ್ತು ಗೃಹಲಕ್ಷ್ಮಿ ಹಣದಲ್ಲಿ ಅತ್ತೆ ಸೊಸೆಗೆ ಬಳೆ ಅಂಗಡಿ ಹಾಕಿಕೊಟ್ಟ, ಹೊಲಿಗೆ ಯಂತ್ರ ಕೊಡಿಸಿದ ಉದಾಹರಣೆಗಳು ಸಾಕಷ್ಟಿವೆ ಎಂದು ಸಿದ್ದರಾಮಯ್ಯ ವಿವರಿಸಿದರು.

2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ. ನೀವು ನಮಗೆ ರಾಜಕೀಯ ಶಕ್ತಿ ಕೊಡಿ. ನಾವು ನಿಮಗೆ ಆರ್ಥಿಕ ಶಕ್ತಿ ನೀಡುವುದನ್ನು ಮುಂದುವರೆಸುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಬಿಜೆಪಿಯವರು ಅನ್ನಭಾಗ್ಯವನ್ನೂ ವಿರೋಧಿಸುತ್ತಾರೆ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯನ್ನೂ ವಿರೋಧಿಸುತ್ತಿದೆ. ಇದಕ್ಕೆ ತಕ್ಕ ಉತ್ತರ ನೀವೇ ನೀಡಬೇಕು ಎಂದು ಕರೆ ನೀಡಿದ ಅವರು, ಸಂವಿಧಾನ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ನೀಡಿದೆ. ಈ ಸಂವಿಧಾನವನ್ನು ಬಿಜೆಪಿ ವಿರೋಧಿಸುತ್ತದೆ. ಬಿಜೆಪಿಯವರ ಗುರೂಜಿ ಸಾವರ್ಕರ್ ಸಂವಿಧಾನ ವಿರೋಧಿಸಿದ್ದರು. ಈ ಇತಿಹಾಸವನ್ನು ರಾಜ್ಯದ ಮಹಿಳೆಯರು, ಯುವತಿಯರಿಗೆ ಸರಿಯಾಗಿ ಮನದಟ್ಟು ಮಾಡಿಸಿ ಎಂದು ಹೇಳಿದರು.

ಜಾತ್ಯತೀತತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧನದ ಮೌಲ್ಯಗಳ ಬಗ್ಗೆ ಸ್ಪಷ್ಟತೆ ಕೊಡುವ ಮೂಲಕ ಕಾರ್ಯಕರ್ತೆಯರನ್ನು ಸಜ್ಜುಗೊಳಿಸಿ ಪಕ್ಷ ಸಂಘಟನೆ ಮಾಡುವ ಸಮಥ್ರ್ಯ ಸೌಮ್ಯಾರೆಡ್ಡಿಯವರಿಗೆ ಇದ್ದು ಈ ದಿಕ್ಕಿನಲ್ಲಿ ಮುಂದುವರೆಯಿರಿ ಎಂದು ಮುಖ್ಯಮಂತ್ರಿ ಹಾರೈಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಮಾಜಿ ಸಚಿವೆ ರಾಣಿ ಸತೀಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಗ, ನಾನು ಖಾನಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆಯಾಗಿ ರಾಜಕೀಯ ಜೀವನ ಶುರು ಮಾಡಿದೆ. ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತರಿಗೂ ಅಧಿಕಾರ ನೀಡುತ್ತದೆ ಎಂಬುದಕ್ಕೆ ನಾನೇ ಉದಾಹರಣೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆಯಾಗಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೇವೆ ಮಾಡುವ ಅವಕಾಶವನ್ನು ಪಕ್ಷ ನೀಡಿತು. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ಸಿಗಬೇಕು. ನಾನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಗ ಸೌಮ್ಯಾ ರೆಡ್ಡಿ, ನಯನಾ ಮೋಟಮ್ಮ ನನಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.

ಸೌಮ್ಯಾ ರೆಡ್ಡಿ ನಾಯಕತ್ವದ ಗುಣವನ್ನು ಹೊಂದಿರುವ ಓರ್ವ ನಾಯಕಿ, ಕೇವಲ ಬೆಂಗಳೂರು, ಜಯನಗರಕ್ಕಷ್ಟೇ ಸೌಮ್ಯಾ ರೆಡ್ಡಿ ಸೀಮಿತವಾಗಿಲ್ಲ, ರಾಜ್ಯಾದ್ಯಂತ ಚಿರಪರಿಚತರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ತುಂಬುವ ಕೆಲಸವನ್ನು ಸೌಮ್ಯಾ ರೆಡ್ಡಿ ನೇತೃತ್ವದ ಮಹಿಳಾ ಕಾಂಗ್ರೆಸ್ ಮಾಡಲಿ ಎಂದು ಅವರು ಹಾರೈಸಿದರು.

ಸಮಾರಂಭದಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಕೃಷ್ಣ ಬೈರೇಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಎನ್.ಎ.ಹಾರಿಸ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು, ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News