ನಾಳೆ(ಮೇ 20) ರಾಜ್ಯ ಸರಕಾರಕ್ಕೆ ಒಂದು ವರ್ಷ ಪೂರ್ಣ : ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ವಾರ್ಷಿಕೋತ್ಸವ

Update: 2024-05-19 14:02 GMT

ಸಿಎಂ ಸಿದ್ದರಾಮಯ್ಯ/ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಳೆ(ಮೇ 20)ಗೆ ಒಂದು ವರ್ಷ ಪೂರೈಸಲಿದ್ದು, ಮೊದಲ ವಾರ್ಷಿಕೋತ್ಸವಕ್ಕೆ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಅಡ್ಡಿಯಾಗಿದೆ.

2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13ರಂದು ಪ್ರಕಟವಾಗಿತ್ತು. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ 135 ಸ್ಥಾಗಳನ್ನು ಗಳಿಸುವ ಮೂಲಕ ಸರಕಾರ ರಚನೆ ಮಾಡಲಾಗಿತ್ತು. ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಜವಾಬ್ದಾರಿ ವಹಿಸಲಾಗಿತ್ತು.

ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿಗಳ ಜಾರಿಗೆ ಅನುಮೋದನೆ ನೀಡಲಾಗಿತ್ತು. ಐದೂ ಗ್ಯಾರಂಟಿಗಳ ಜಾರಿಗೊಳಿಸುವ ಮೂಲಕ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.

ಈ ಮಧ್ಯೆ ಹುಬ್ಬಳ್ಳಿಯ ನೇಹಾ ಹಿರೇಮಠ ಮತ್ತು ಅಂಜಲಿ, ಕೊಡಗಿನ ವಿದ್ಯಾರ್ಥಿ ಮೀನಾ ಕೊಲೆ ಪ್ರಕರಣಗಳು ಸರಕಾರಕ್ಕೆ ಕಾನೂನು ಸುವ್ಯವಸ್ಥೆಯ ಸವಾಲಿನ ಪ್ರಶ್ನೆಯನ್ನು ಮುಂದಿಟ್ಟಿವೆ. ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‍ಡ್ರೈವ್ ಪ್ರಕರಣ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಗಳ ನಡುವೆಯೇ ಪ್ರಜ್ವಲ್ ಪ್ರಕರಣ ಆಡಳಿತ-ಪ್ರತಿಪಕ್ಷಗಳ ಮುಖಂಡರ ನಡುವೆ ತೀವ್ರ ವಾಗ್ವಾದ, ಆರೋಪ-ಪ್ರತ್ಯಾರೋಪಗಳಿಗೂ ಕಾರಣವಾಗಿದೆ.

ತೀವ್ರ ಸ್ವರೂಪದ ಬರ, ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಇದೀಗ ಮಳೆಯಾಗುತ್ತಿರುವುದರಿಂದ ಬರದ ತೀವ್ರತೆ ತಗ್ಗಿದೆ ಎಂದು ಹೇಳಲಾಗುತ್ತಿದೆ. ಆದರೆ, ರಾಜಕೀಯ ಅಧಿಕಾರದ ಸಂಘರ್ಷ ಯಾವ ಕ್ಷಣದಲ್ಲಾದರೂ ಸ್ಫೋಟಗೊಳ್ಳುವ ಆತಂಕವಿದೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ‘ಆಪರೇಷನ್ ಕಮಲ’ ಹೇಳಿಕೆ ರಾಜಕೀಯ ವಲಯದಲ್ಲಿ ತಳಮಳ ಸೃಷ್ಟಿಸಿದೆ.

ರಾಜ್ಯದ 28ಲೋಕಸಭಾ ಸ್ಥಾನಗಳ ಪೈಕಿ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಉಮೇದಿಯಲ್ಲಿರುವ ಕಾಂಗ್ರೆಸ್ ಪಕ್ಷವಿದೆ. ಜೂ.4ಕ್ಕೆ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಆ ಬಳಿಕ ಲೋಕಸಭಾ ಚುನಾವಣೆ ಗೆಲುವು ಹಾಗೂ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧತೆ ನಡೆಸಿದೆ ಎಂದು ಗೊತ್ತಾಗಿದೆ.

ನಾಳೆ ಮಾಧ್ಯಮ ಸಂವಾದ: ‘ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ನಾಳೆ(ಮೇ 20)ಗೆ ಒಂದು ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ‘ಮಾಧ್ಯಮ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಪ್ರೆಸ್‍ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News