ರಾಜ್ಯ ಮಟ್ಟದ ವಕೀಲರ ಸಮ್ಮೇಳನ: ಆಹ್ವಾನ ಪತ್ರಿಕೆಯಿಂದ ಡಿ.ಕೆ ಶಿವಕುಮಾರ್ ಹೆಸರು ಕೈ ಬಿಟ್ಟ ವಕೀಲರ ಪರಿಷತ್
ಬೆಂಗಳೂರು, ಆ.9: ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ವಕೀಲರ ಸಮ್ಮೇಳನದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಅತಿಥಿಗಳ ಪಟ್ಟಿಯಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೆಸರನ್ನು ಕೈಬಿಟ್ಟಿರುವುದು ವರದಿಯಾಗಿದೆ.
ಡಿ.ಕೆ ಶಿವಕುಮಾರ್ ಅವರ ಮೇಲೆ ಕೆಲವು ಗಂಭೀರ ಆರೋಪಗಳಿದ್ದು, ಕೆಲವು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣಗಳು ಬಾಕಿ ಇರುವಾಗ ನ್ಯಾಯಾಧೀಶರೊಂದಿಗೆ ವೇದಿಕೆ ಹಂಚಿಕೊಳ್ಳುವ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ ಎಸ್ ಬೋಪಣ್ಣ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ, ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.