‘ಗ್ಯಾರಂಟಿ’ಗಳ ಕುರಿತ ಹೇಳಿಕೆ | ಶಾಸಕ ಗವಿಯಪ್ಪಗೆ ಶೋಕಾಸ್ ನೋಟೀಸ್ : ಡಿ.ಕೆ.ಶಿವಕುಮಾರ್

Update: 2024-11-26 15:09 GMT

 ಡಿ.ಕೆ.ಶಿವಕುಮಾರ್

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪರಿಗೆ ಪಕ್ಷದಿಂದ ಸೋಕಾಸ್ ನೋಟೀಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಇಲ್ಲಿನ ವಸಂತನಗರದಲ್ಲಿರುವ ಅಂಬೇಡ್ಕರ್ ಭವನದ ಬಳಿ ಸುದ್ದಿಗಾರರೊಂದಿಗೆ ‘ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ’ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯಿಸುತ್ತಾ, ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟೀಸ್ ನೀಡುತ್ತೇವೆ ಎಂದರು.

ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹದ್ದೇ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು.

ನಾನು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ದಿಲ್ಲಿಗೆ ಭೇಟಿ ನೀಡುತ್ತಿದ್ದೇನೆ ಜೊತೆಗೆ ಜಾರ್ಖಂಡ್‌ನಲ್ಲಿ ಹೇಮಂತ್ ಸೊರೇನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಇನ್ನು ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News