ಭ್ರೂಣ ಹತ್ಯೆ ತಡೆಗೆ ಬಿಗಿ ಕ್ರಮ: ಸಚಿವ ದಿನೇಶ್ ಗುಂಡೂರಾವ್

Update: 2024-01-24 14:53 GMT

Screengrab:X/@dineshgrao

ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬುಧವಾರ ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರೂಣ ಹತ್ಯೆ ಈ ಪ್ರಮಾಣದಲ್ಲಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನ ಸಹಿಸಲು ಸಾಧ್ಯವಿಲ್ಲ. ಇವತ್ತಿನ ಕಾಲಘಟ್ಟದಲ್ಲೂ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಾವು ಜಾಗೃತಿ ಮೂಡಿಸುವ ಪರಿಸ್ಥಿತಿ ಎದುರಾಗಿದೆ. ಆದರೆ ಸರಕಾರ ಹೆಣ್ಣು ಮಕ್ಕಳ ಸುರಕ್ಷಿತೆಗೆ ಎಲ್ಲ ರೀತಿಯ ಬಿಗಿ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

ಭ್ರೂಣ ಹತ್ಯೆಗಳನ್ನ ತಡೆಯಲು ಈಗಾಗಲೇ ರಾಜ್ಯ ಸರಕಾರ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕಾರ್ಯಪಡೆಗಳನ್ನ ರಚಿಸಿದೆ. ಭ್ರೂಣ ಹತ್ಯೆ ನಡೆಸುವವರ ವಿರುದ್ಧ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆಗಳನ್ನ ಇನ್ನಷ್ಟು ಹೆಚ್ಚಿಸಲಾಗುವುದು. ನಕಲಿ ವೈದ್ಯರು ಹಾಗೂ ಕ್ಲಿನಿಕ್‍ಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ನಕಲಿ ವೈದ್ಯರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಗುಂಡೂರಾವ್ ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಆರೋಗ್ಯ ಸೌಧದಲ್ಲಿ ಪಿಂಕ್ ಬಲೂನ್‍ಗಳನ್ನ ಗಾಳಿಯಲ್ಲಿ ತೇಲಿ ಬಿಡಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಆಯುಕ್ತ ರಂದೀಪ್ ಸೇರಿದಂತೆ ಸಾವಿರಾರು ಮಹಿಳಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಬೃಹತ್ ಕೇಕ್ ಕಟ್ ಮಾಡುವ ಮೂಲಕ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮಾಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News