ಸಾಗರ | ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರಚೋದನೆ ನೀಡಿದ ಆರೋಪಿ ಯುವಕನ ಸೆರೆ

Update: 2023-07-13 07:42 GMT

ಸಾಂದರ್ಭಿಕ ಚಿತ್ರ (ಸೊರ್ಸ್: PTI)

ಸಾಗರ, ಜು.13: ನಗರದ ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು  ಪೊಲೀಸರು ಬಂಧಿಸಿದ್ದಾರೆ.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬಿಎಸ್ಸಿ ಪದವಿ ವಿದ್ಯಾರ್ಥಿನಿ, ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಶಿರಳಗಿ ನಿವಾಸಿ ಭವ್ಯಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಶಿವಮೊಗ್ಗ ಮೂಲದ ಪ್ರದೀಪ್ ಎಂಬಾತನನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಪ್ರದೀಪನಿಗೆ ಭವ್ಯಾ ಅವರ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ ಪದೇ ಫೋನ್ ಮಾಡಿ ಪ್ರೀತಿಸುವಂತೆ ಪ್ರದೀಪ್ ಪೀಡಿಸುತ್ತಿದ್ದ ಎಂದು ಭವ್ಯಾ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.

ಪ್ರದೀಪನ ಹಿಂಸೆ ತಾಳಲಾರದೆ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಹೋದರ ಕೃಷ್ಣಮೂರ್ತಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News