ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಗೆ ರೈತರಿಂದ ಮುತ್ತಿಗೆ
ಹಾವೇರಿ, ಸೆ.5: ಪರಿಹಾರ ಆಸೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು ಸಚಿವರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.
ಮಂಗಳವಾರ ನಗರದ ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಮುಗಿಸಿ ಹೊರಬರುತ್ತಿದ್ದ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತ ಮುಖಂಡರು ಮುತ್ತಿಗೆ ಹಾಕಿ, ''ನಿಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಮತ್ತು ರೈತರಲ್ಲಿ ಕ್ಷಮೆ ಕೇಳಬೇಕು'' ಎಂದು ಪಟ್ಟು ಹಿಡಿದರು. ಆಗ ಸಚಿವರು “ನನ್ನ ಹೇಳಿಕೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ತಪ್ಪು ಗ್ರಹಿಕೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ನಾನು ರೈತರ ಬಗ್ಗೆ ಹಗುರವಾಗಿ ಮಾತನಾಡಿಲ್ಲ. ರೈತರ ಬಗ್ಗೆ ನಿಜವಾದ ಕಾಳಜಿ ಇದೆ' ಎಂದು ಹೇಳಿ ರೈತ ಮುಖಂಡರನ್ನು ಸಮಾಧಾನ ಪಡಿಸಿದರು.
ಸಚಿವರ ಸ್ಪಷ್ಟನೆ
ಜಿಲ್ಲೆಯಾದ್ಯಂತ ರೈತ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ, ತುರ್ತು ಪತ್ರಿಕಾಗೋಷ್ಠಿ ಕರೆದ ಸಚಿವರು, 'ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಂಡು ರೈತ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪರಿಹಾರ ಮೊತ್ತ ಜಾಸ್ತಿಯಾದ ನಂತರ ರೈತ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ ಎಂದು ಹೇಳಿದ್ದೇನೆ. ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ' ಎಂದು ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.