ಬಿಜೆಪಿ ಅವಧಿಯಲ್ಲೇ ತಿರುಪತಿ ಲಡ್ಡು ತಯಾರಿಗೆ ತುಪ್ಪ ಸರಬರಾಜು ಸ್ಥಗಿತ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Update: 2023-08-01 08:06 GMT

ಬೆಂಗಳೂರು: 'ಸಿದ್ದರಾಮಯ್ಯ ಸರ್ಕಾರದ ಅಸಡ್ಡೆಯಿಂದ ತಿರುಪತಿ ಲಡ್ಡು ತಯಾರಿಗೆ ನಂದಿನಿ ತುಪ್ಪದ ಸರಬರಾಜು ನಿಂತಿದೆ' ಎಂಬ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. 

ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಅವರು, ''ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ'' ಎಂದು ಸ್ಪಷ್ಟಪಡಿಸಿದ್ದಾರೆ. 

''ನಳಿನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ?'' ಎಂದು ಪ್ರಶ್ನೆ ಮಾಡಿದ್ದಾರೆ. 

''ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ'' ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News