ಸುರ್ಜೇವಾಲಾ ನೇತೃತ್ವದಲ್ಲಿ ನಾಳೆ(ಜ.13) ಕಾಂಗ್ರೆಸ್ ಮಹತ್ವದ ಸಭೆ

Update: 2025-01-12 16:40 GMT

ರಣದೀಪ್ ಸಿಂಗ್ ಸುರ್ಜೇವಾಲಾ| PC: PTI

ಬೆಂಗಳೂರು : ಕಾಂಗ್ರೆಸ್ ಪಾಳಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಔತಣಕೂಟದ ರಾಜಕಾರಣ, ಅಧಿಕಾರ ಹಂಚಿಕೆಯ ಬಹಿರಂಗ ಹೇಳಿಕೆಗಳು, ಸಿಎಂ, ಡಿಸಿಎಂ ಬಣಗಳ ಹೇಳಿಕೆ-ಪ್ರತಿಹೇಳಿಕೆಗಳಿಗೆ ಕಡಿವಾಣ ಹಾಕಲು ನಾಳೆ(ಜ.13) ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮುಂದಾಳತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದೆ.

ಸೋಮವಾರ ಬೆಳಗ್ಗೆ ನಡೆಯುವ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಬೆಳಗಾವಿಯಲ್ಲಿ ಜ.21ರಂದು ನಡೆಯಲಿರುವ ಗಾಂಧಿ ಭಾರತ ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ. ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ವಿವಿಧ ಔತಣಕೂಟದ ಸಭೆಗಳು, ಅನುದಾನ ಹಂಚಿಕೆ ಹೇಳಿಕೆಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಕ್ಷದ ಹಾಲಿ ಮತ್ತು ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಸಂಸದರು, ಶಾಸಕಾಂಗ ಪಕ್ಷದ ಸದಸ್ಯರು, ಕೆಪಿಸಿಸಿ ಸರ್ವ ಸದಸ್ಯರು ಹಾಗೂ ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಅಂಗಳದಲ್ಲಿ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎನ್ನುವ ಗುಂಪು ಒಂದೆಡೆಯಾದರೆ, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಗುಂಪು ಮತ್ತೊಂದೆಡೆ ಸದ್ದು ಮಾಡುತ್ತಿದೆ. ಸದ್ಯದಲ್ಲೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು, ಹಲವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅಡ್ಡಿಯಾಗಬಾರದೆಂದು ಹೈಕಮಾಂಡ್ ವಿವಾದಕ್ಕೆ ಇತಿಶ್ರೀ ಹಾಡಲು ಮುಂದಾಗಿದೆ.

ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಔತಣಕೂಟದ ನಂತರ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಔತಣಕೂಟ ಕೊನೆ ಕ್ಷಣದಲ್ಲಿ ರದ್ದಾಗಿತ್ತು. ಇದರಿಂದ ಕೋಪಗೊಂಡು ಕೆಲವರು ಬಹಿರಂಗ ಹೇಳಿಕೆಗಳನ್ನು ನೀಡಿದ್ದು ಪಕ್ಷಕ್ಕೆ ಮುಜುಗರ ಉಂಟುಮಾಡಿತ್ತು. ಆಯಾ ಜಾತಿಯ ಶಾಸಕರುಗಳ ನೇತೃತ್ವದಲ್ಲಿ ನಾಯಕರು ಸಭೆ ನಡೆಸಲೂ ಕೂಡ ಮುಂದಾಗಿದ್ದರು. ಇದೆಲ್ಲದಕ್ಕೂ ಇಂದಿನ ಸಭೆಯಲ್ಲಿ ಪೂರ್ಣವಿರಾಮ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News