ಬೀದಿ ನಾಯಿಗಳ ಸಮೀಕ್ಷೆ ನಡೆಸಿ ರೋಗನಿರೋಧಕ ಲಸಿಕೆ ನೀಡಲು ಕ್ರಮ : ಸಚಿವ ರಹೀಂ ಖಾನ್
Update: 2023-12-12 18:21 GMT
ಬೆಳಗಾವಿ: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆಯನ್ನು ಕೈಗೊಂಡು, ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ರೋಗನಿರೋಧಕ ಲಸಿಕೆಯನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ.
ಮಂಗಳವಾರ ಪರಿಷತ್ತಿನ ಪಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಅವರು, ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಗೆ ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸೂಚಿಸಲಾಗಿದೆ ಎಂದರು.
ಅದೇ ರೀತಿ, ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವತಿಯಿಂದ ಶಿಷ್ಟಾಚಾರವನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.