‘ಇ-ಸ್ವತ್ತು’ ಸರಳೀಕರಣ ಹಾಗೂ ಸಬಲೀಕರಣಕ್ಕಾಗಿ ಕಾರ್ಯಪಡೆ : ಸಚಿವ ಪ್ರಿಯಾಂಕ್ ಖರ್ಗೆ

Update: 2024-11-12 13:45 GMT

 ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇ-ಖಾತಾ ಸಂಬಂಧ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಅವರು ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗ್ರಾಮಠಾಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಛಯಗಳು ನಿರ್ಮಾಣಗೊಂಡಿದ್ದು, ಬಹುಪಾಲು ಆಸ್ತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾಮ ಪಂಚಾಯತಿಗಳ ಸಂಪನ್ಮೂಲ ಕ್ರೋಢೀಕರಣದಲ್ಲಿ ಹಿನ್ನಡೆ ಉಂಟಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಗ್ರಾಮ ಪಂಚಾಯತಿಗಳನ್ನು ಆರ್ಥಿಕವಾಗಿ ಸದೃಢಗೊಳಿಸುವಲ್ಲಿ ಸಬಲೀಕರಣ ಹಾಗೂ ನಾಗರಿಕರಿಗೆ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ಅನಿವಾರ್ಯತೆ ಇರುವುದರಿಂದ ಸಮಸ್ಯೆಗಳನ್ನು ಬಗೆಹರಿಸಿ ಪರಿಹಾರಗಳನ್ನು ಕಂಡುಕೊಳ್ಳಲು ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಅವರು ತಿಳಿಸಿದರು.

ಗ್ರಾಮಗಳಿಗೆ ಹೊಂದಿಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು ದಾಖಲೆಯನ್ನು ಸುಗಮವಾಗಿ ಪಡೆದುಕೊಳ್ಳುವಲ್ಲಿ ಪರಿಹಾರಗಳನ್ನು ಕಾರ್ಯಪಡೆ ಸೂಚಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಸಭೆಯಲ್ಲಿ ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್, ಇ-ಆಡಳಿತ ವಿಭಾಗದ ನಿರ್ದೇಶಕಿ ಡಾ.ನಂದಿನಿದೇವಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News