ಡೆಂಗಿ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಡೆಂಗಿ ಜ್ವರ ಪ್ರಕರಣಗಳು ಹೆಚ್ಚಳಗೊಂಡಿದ್ದು, ಈ ಸಂಬಂಧ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚನೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯದಲ್ಲಿ ಇದುವರೆಗೆ 7,362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಆದರೂ, ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗಿ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು ಎಂದು ಸೂಚಿಸಿದರು.
ವೈದ್ಯಕೀಯ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗಿ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗಿ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು.ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಎಂದು ಉಲ್ಲೇಖಿಸಿದರು.
ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ ಕ್ಲಿನಿಕ್‍ಗಳು ಕಾರ್ಯಾಚರಿಸುತ್ತಿವೆ. ನಮ್ಮ ಕ್ಲಿನಿಕ್‍ಗಳಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನೊಂದೆಡೆ, ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ಕೊಲೆ ಪ್ರಕರಣಗಳಲ್ಲಿ ತಡ ಮಾಡದೆ ಅನುಕಂಪದ ಸರಕಾರ ನೌಕರಿ ನೀಡಬೇಕು. ಸದ್ಯ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕøತಗೊಂಡಿವೆ. 24,186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16,426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56,479 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಲಸಿಕಾ ಕಾರ್ಯಕ್ರಮ: ರಾಜ್ಯದಲ್ಲಿ 2.4 ಕೋಟಿ ಲೀಟರ್ ಪ್ರತಿದಿನ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದನೆ ಹೆಚ್ಚಿಸಲು ಪೂರಕವಾಗಿ ಲಸಿಕಾ ಕಾರ್ಯಕ್ರಮವನ್ನು ಸಮಗ್ರವಾಗಿ ಕೈಗೊಳ್ಳಬೇಕು. ಜತೆಗೆ, ಜಾನುವಾರುಗಳ ಮರಣಕ್ಕೆ ಪರಿಹಾರವನ್ನು ತಕ್ಷಣ ಒದಗಿಸಬೇಕು. ಪ್ರಸ್ತುತ ಸಾಲಿನಲ್ಲಿ ಸಾವಿಗೀಡಾದ 10,800 ಜಾನುವಾರುಗಳಿಗೆ 5.83 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಈ ಹಿಂದೆ ಸಾವಿಗೀಡಾದ ಜಾನುವಾರುಗಳಿಗೆ ನೀಡಬೇಕಾದ ಪರಿಹಾರ ಬಾಕಿ ಕುರಿತು ಪರಿಶೀಲನೆ ನಡೆಸಬೇಕು ಎನ್ನುವ ಸೂಚನೆಯನ್ನು ಸಿಎಂ ನೀಡಿದರು.