ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

Update: 2023-09-13 02:22 GMT

ಸಾಂದರ್ಭಿಕ ಚಿತ್ರ

ಉಡುಪಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರು ಸಿಸಿಬಿ ವಿಭಾಗದ ಪೊಲೀಸರು ಮಂಗಳವಾರ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಉದ್ಯಮಿಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿದ  ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದರು ಎಂಬ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.

ಈ ಬಗ್ಗೆ ಉದ್ಯಮಿ ಬೆಂಗಳೂರಿನಲ್ಲಿ ದೂರು ನೀಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಚೈತ್ರಾ ಕುಂದಾಪುರ ಜೊತೆಗೆ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಗಗನ್ ಕಡೂರು, ಪ್ರಸಾದ್  ಸಹಿತ ಒಟ್ಟು ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News