ಸುಪ್ರೀಂ ತೀರ್ಪಿನ ಬಳಿಕ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದ ಶಿಕ್ಷಣ ಇಲಾಖೆ
ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೆ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೆ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 ಮೌಲ್ಯಾಂಕನ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
ಮಂಗಳವಾರ ಇಲಾಖೆಯು ಪ್ರಕಟನೆ ಹೊರಡಿಸಿದ್ದು, ಹೈಕೋರ್ಟ್‍ನ ದ್ವಿಸದಸ್ಯ ಪೀಠವು 5, 8 ಮತ್ತು 9ನೆ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಿತ್ತು. ಅದರಂತೆ ಮಾ.11ರಿಂದ ಮೌಲ್ಯಂಕನ ಪರೀಕ್ಷೆ ನಡೆಸಲಾಗಿತ್ತು ಎಂದು ತಿಳಿಸಿದೆ.
ಸುಪ್ರೀಂ ಕೋರ್ಟ್, ಹೈಕೋರ್ಟ್‍ನ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ರದ್ದುಪಡಿಸಿದ್ದು, ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿದೆ. ಈ ಹಿನ್ನೆಲೆಯಲ್ಲಿ ಮಾ.13ರಿಂದ ನಡೆಯಬೇಕಾಗಿದ್ದ 5, 8 ಮತ್ತು 9ನೆ ತರಗತಿಗಳ ಮೌಲ್ಯಾಂಕನವನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಕಟನೆ ಸ್ಪಷ್ಟಪಡಿಸಿದೆ.